ಬೆಂಗಳೂರಿನಲ್ಲಿ ಶನಿವಾರ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – ಈ ರಸ್ತೆಗಳಲ್ಲಿ ವಾಹನ ಸವಾರರಿಗೆ ತಟ್ಟಲಿದೆ ಟ್ರಾಫಿಕ್ ಬಿಸಿ!
ಬೆಂಗಳೂರು: ರಾಜ್ಯದಲ್ಲಿ ಬರದ ಛಾಯೆ ಇರುವ ಹೊತ್ತಲ್ಲೇ ಮುಂದಿನ 15 ದಿನಗಳವರೆಗೆ ಪತಿನಿತ್ಯ 5 ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕಾವೇರಿ ವಿವಾದದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಶನಿವಾರ ಬೃಹತ್ ಪ್ರತಿಭಟನೆಗೆ ಕರೆಕೊಟ್ಟಿದ್ದು, ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹೀಗಾಗಿ ವಾಹನ ಸಂಚಾರದಲ್ಲಿ ಭಾರಿ ವ್ಯತ್ಯಯವಾಗಲಿದೆ. ಮೈಸೂರು ಬ್ಯಾಂಕ್ ಸರ್ಕಲ್ ಮೊದಲೇ ವಾಹನ ದಟ್ಟಣೆ ಇರುವ ರಸ್ತೆಯಾಗಿದ್ದು, ಬಿಜೆಪಿ ಪ್ರತಿಭಟನೆಯಿಮದಾಗಿ ಕೆಜಿ ರಸ್ತೆ, ಬಳ್ಳಾರಿ ರಸ್ತೆ ಹಾಗೂ ಫ್ರೀಡಂ ಪಾರ್ಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ.
ಇದನ್ನೂಓದಿ: ರಾಜ್ಯದಲ್ಲಿ ಬರದ ಛಾಯೆ – ಸರಳ ಮತ್ತು ಅರ್ಥಪೂರ್ಣ ದಸರಾ ಆಚರಣೆಗೆ ಸರ್ಕಾರ ನಿರ್ಧಾರ
ಶುಕ್ರವಾರ ಮಂಡ್ಯ ನಗರದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ತೀವ್ರ ಮಟ್ಟದ ಹೋರಾಟ ನಡೆದಿತ್ತು. ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಚುಂಚನಗಿರಿ ಕ್ಷೇತ್ರದ ನಿರ್ಮಲಾನಂದನಾಥ ಶ್ರೀ ಸಾಥ್ ನೀಡಿದ್ದರು. ಹಾಗೇ ಹೋರಾಟಗಾರರಿಗೆ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೆಂಬಲ ನೀಡಲಾಗಿದೆ. ರೈತರ ಹೋರಾಟದಲ್ಲಿ ನಟ, ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಶ್ ಭಾಗಿಯಾಗಿದ್ದರು. ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದಲೂ ಪ್ರತಿಭಟನೆ ನಡೆದಿತ್ತು. ಶನಿವಾರ ಮಂಡ್ಯ ಬಂದ್ಗೆ ಕರೆ ನೀಡಲಾಗಿದೆ.