ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ವಿಧಿವಶ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ಸೋಮವಾರ ಮುಂಜಾನೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಶ್ರೀನಿವಾಸ್‌ ಪ್ರಸಾದ್‌ ಬಹು ಅಂಗಾಂಗ ಸಮಸ್ಯೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ  ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್‌ ಏರ್‌ಪೋರ್ಟ್‌ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ  ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಕ್ರಿಕೆಟ್.. ಕಾರು ಮತ್ತು ಕಾವ್ಯಾ!.. ಗಜಕೇಸರಿ ಯೋಗದಿಂದ SRH ಗೆಲುವು! – ಭಾರತದ ಹೊಸ ನ್ಯಾಷನಲ್ ಕ್ರಷ್!

ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11.30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂಬೇಡ್ಕರ್​ ಟ್ರಸ್ಟ್​​ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಇತ್ತೀಚಿನ ದಿನಗಳಲ್ಲಿ ತಂದೆಯ ಆರೋಗ್ಯ ಗಂಭೀರವಾಗಿತ್ತು. ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಿದ್ದೆವು. ವೈದ್ಯರು ಅವರನ್ನು ಗುಣಪಡಿಸಲು ಶ್ರಮ ಪಟ್ಟಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಮ್ಮನ್ನು ಅಗಲಿದ್ದಾರೆ. ಮೈಸೂರಿನ ಜಯಲಕ್ಷ್ಮೀಪುರಂ ನಿವಾಸದಲ್ಲಿ ವಿಧಿವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ಪ್ರಸಾದ್ ಹೇಳಿದರು.

ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವೇಳೆ ಸ್ವಲ್ಪ ಚೇತರಿಕೆ ಕಂಡಿದ್ದರು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದರು. ರವಿವಾರದಿಂದ (ಏ.28) ಮಾತನಾಡಲು ಆಗುತ್ತಿರಲಿಲ್ಲ. ಈ ವೇಳೆ ಪೆನ್ನು ಪೇಪರ್ ಕೊಟ್ಟಿದ್ವಿ. ಆಗ ಪೇಪರ್​ನಲ್ಲಿ coffee ಅಂತ ಬರೆದಿದ್ದರು. ಎರಡು ಗುಟುಕು ಕಾಫಿ ಕುಡಿದರು. ಮಧ್ಯರಾತ್ರಿ ಚಿಕಿತ್ಸೆ ಫಲಿಸದೆ ನಿಧನರಾದರು ಎಂದು ತಿಳಿಸಿದರು.

ವಿ.ಶ್ರೀನಿವಾಸಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಮೂಲತಃ ಮೈಸೂರಿನ ಅಶೋಕಪುರಂನವರಾದ ಶ್ರೀನಿವಾಸಪ್ರಸಾದ್ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಈ ಬಾರಿ ಎಲೆಕ್ಷನ್‌ ಟಿಕೆಟ್‌ ಕೈತಪ್ಪಿತ್ತು. ಬಳಿಕ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು.

Shwetha M

Leave a Reply

Your email address will not be published. Required fields are marked *