ರಾಜ್ಯದ 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್, ರೋಪ್ ವೇ ಸೌಲಭ್ಯ – ಬೆಂಗಳೂರು To ತುಮಕೂರು ನಮ್ಮ ಮೆಟ್ರೋ ರೈಲು
2024-25ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರವಾಸಿಗರಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ಕರ್ನಾಟಕದ ಪ್ರಮುಖ 10 ಪ್ರವಾಸಿತಾಣಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಕೇಬಲ್ ಕಾರ್ ರೋಪ್ ವೇ ಸೌಲಭ್ಯ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕ್ರೀಡಾಪಟುಗಳಿಗೆ ಬಜೆಟ್‌ನಲ್ಲಿ ಬಂಪರ್ ಗಿಫ್ಟ್- ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ
2024-25ನೇ ಸಾಲಿನ ಬಜೆಟ್‌ನಲ್ಲಿ ಮಾತನಾಡಿರುವ ಸಿಎಂ ಸಿದ್ಧರಾಮಯ್ಯ ಅವರು, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು. ಇದರಲ್ಲಿ ಕರ್ನಾಟಕದ ಹತ್ತು ಪ್ರವಾಸಿ ತಾಣಗಳಲ್ಲಿ ರೋಪ್‌ವೇ ಹಾಗೂ ಕೇಬಲ್ ಕಾರ್ ಸೌಲಭ್ಯ ಅಭಿವೃದ್ದಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು.
ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸಲಾಗುವುದು. ರಾಜ್ಯದ 530 ಸಂರಕ್ಷಿತ ಸ್ಮಾರಕಗಳನ್ನು 3ಡಿ ಲೇಸರ್ ಸ್ಕ್ಯಾನಿಂಗ್ ಮೂಲಕ ಡಿಜಿಟಲ್ ದಾಖಲೀಕರಣ ಮಾಡಲಾಗಿದೆ. ಈ ಕಾರ್ಯವನ್ನು ದೇಶದಲ್ಲಿಯೇ ಪ್ರಥಮವಾಗಿ ಕೈಗೊಂಡಿರುವ ಶ್ರೇಯಸ್ಸು ನಮ್ಮ ರಾಜ್ಯದ್ದಾಗಿದೆ. ಈ ಡಿಜಿಟಲ್ ಮಾಹಿತಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಮತ್ತು ಸಂವಾದಾತ್ಮಕವಾಗಿ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.
ರಾಜ್ಯದಲ್ಲಿ ಪರಿಸರ ಪ್ರವಾಸೋದ್ಯಮವನ್ನು ಉತ್ತೇಜಿಸಲು ಬಂಡೀಪುರ, ದಾಂಡೇಲಿ ಮತ್ತು ಕಬಿನಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಇಂಟರ್‌ಪ್ರಿಟೇಷನ್ ಸೆಂಟರ್‌ಗಳನ್ನು ಜೆ.ಎಲ್.ಆರ್ ಸಂಸ್ಥೆಯ ಮೂಲಕ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಬೆಂಗಳೂರಿನಿಂದ ತುಮಕೂರಿಗೆ ನಮ್ಮ ಮೆಟ್ರೋ
ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಜಧಾನಿ ಬೆಂಗಳೂರಿನ ಹೊರಗೂ ಮೆಟ್ರೋ ರೈಲು ಸಂಪರ್ಕ ಕುರಿತು ಮಾತನಾಡಿದ್ದಾರೆ. ಬೆಂಗಳೂರಿನಿಂದ ತುಮಕೂರಿಗೆ ಮೆಟ್ರೋ ಸೇವೆ ಆರಂಭದ ಕುರಿತು ಸಿಎಂ ಸಿದ್ಧರಾಮಯ್ಯ ಅವರು ಬಜೆಟ್‌ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು BIEC ಯಿಂದ ತುಮಕೂರಿನವರೆಗೆ ನಮ್ಮ ಮೆಟ್ರೋ ಸ್ಥಾಪನೆಗೆ ಕರ್ನಾಟಕ ಬಜೆಟ್‌ನಲ್ಲಿ ಪ್ರಸ್ತಾವನೆ ಮಾಡಲಾಗಿದೆ. ಅಲ್ಲದೇ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿಯವರೆಗೆ ನಮ್ಮ ಮೆಟ್ರೋ ಸ್ಥಾಪನೆಗೆ ಸಹ ಬಜೆಟ್‌ನಲ್ಲಿ ಪ್ರಸ್ತಾವನೆ ಮಾಡಲಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ನಮ್ಮ ಮೆಟ್ರೋ ವಿಸ್ತರಣೆಯ ಪ್ರಸ್ತಾಪವನ್ನು ಬಜೆಟ್‌ನಲ್ಲಿ ಮಾಡಲಾಗಿದೆ.