ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ! – ಸರ್ವ ಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಣಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಸ್ಥಿತಿಯಲ್ಲಿ ಇಲ್ಲ! – ಸರ್ವ ಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಣಯ

ಬೆಂಗಳೂರು: ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚನೆ ನೀಡಿತ್ತು. ಈ ಹಿನ್ನೆಲೆ ಬುಧವಾರ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲಾಗಿದ್ದು, ಕಾವೇರಿ ನೀರು ಹರಿಸುವ ಬಗ್ಗೆ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಈ ಸಂಬಂಧ ಸಿಡಬ್ಲ್ಯೂಆರ್‌ಸಿಗೆ ಪತ್ರ ಬರೆಯಲು ಸರ್ಕಾರ ನಿರ್ಧರಿಸಿದೆ.

ಇದನ್ನೂ ಓದಿ: ಬೆಂಗಳೂರಿಗರಿಗೆ ಕಾವೇರಿ ನೀರಿನ ಚಿಂತೆಯೇ ಇಲ್ಲ.. ನೀರಿನ ವಿಚಾರದಲ್ಲಿ ಮೌನ ಅಚ್ಚರಿ ತಂದಿದೆ! – ಹೆಚ್‌.ಡಿ ಕುಮಾರಸ್ವಾಮಿ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿದೆ. ಇದನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ ಎಂದು ಹೇಳಿದ್ದಾರೆ.

ಸರ್ವ ಪಕ್ಷಗಳ ಸಭೆಯ ಆರಂಭದಲ್ಲಿ ಸಿಡಬ್ಲ್ಯೂಆರ್‌ಸಿ ಆದೇಶ ಪಾಲನೆ ಮಾಡಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಆದೇಶ ಪಾಲನೆ ಮಾಡದಿದ್ದರೆ ಎದುರಾಗುವ ಕಾನೂನು ತೊಡಕುಗಳ ಬಗ್ಗೆಯೂ ಆರಂಭದಲ್ಲಿ ರಾಜಕೀಯ ನಾಯಕರು ಗಂಭೀರ ಚರ್ಚೆ ನಡೆಸಿ ವಿಪಕ್ಷ ನಾಯಕರ ಅಭಿಪ್ರಾಯ ಪಡೆದುಕೊಳ್ಳಲಾಯಿತು. ಈ ವೇಳೆ ತಮಿಳುನಾಡಿಗೆ ಕಾವೇರಿ‌ ನೀರು ಬಿಡುವುದು ಬೇಡ. ಸಿಡಬ್ಲ್ಯೂಆರ್‌ಸಿ ಆದೇಶ ಪಾಲಿಸಬೇಡಿ. ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡುವಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆ ತಮಿಳುನಾಡಿಗೆ ಕಾವೇರಿ ನೀರು ಬಿಡದೇ ಇರಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ.

ಇದೇ 21 ರಂದು ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದ ವಿಚಾರಣೆಗೆ ಬರಲಿದೆ. ತಮಿಳುನಾಡಿಗೆ ನೀರು ಹರಿಸದಿರುವ ನಿರ್ಣಯ ತೆಗೆದುಕೊಂಡರೆ, ಸರ್ಕಾರದ ಬೆನ್ನಿಗೆ ನಿಲ್ಲುವುದಾಗಿ ಬಿಜೆಪಿ ನಾಯಕರು ತಿಳಿಸಿದರು. ಗಂಭೀರ ಚರ್ಚೆಯ ನಂತರ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡದಿರಲು ನಿರ್ಣಯ ಕೈಗೊಳ್ಳಲಾಯಿತು. ಸರ್ವ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ನೀರು ಹರಿಸದಿರಲು ನಿರ್ಧರಿಸಲಾಗಿದೆ.

Shwetha M