ಖರ್ಗೆ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಬಿಜೆಪಿಯ ಕೀಳು ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ – ಕಾಂಗ್ರೆಸ್ ಕಿಡಿ
ಬೆಂಗಳೂರು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅರಣ್ಯವೇ ಇಲ್ಲದ ಪ್ರದೇಶದವರು ಅರಣ್ಯ ಸಚಿವರಾಗುವುದು ನಮ್ಮ ದುರದೃಷ್ಟ. ಬೀದರ್ ಮೂಲದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮರಗಿಡ ಎಂದರೆ ಏನು? ನೆರಳು ಎಂದರೆ ಏನು? ಎಂಬುದೇ ಗೊತ್ತಿಲ್ಲ. ಆ ಭಾಗದವರು ಸುಟ್ಟು ಕರಕಲಾಗಿರುತ್ತಾರೆ. ಖರ್ಗೆ ಅವರನ್ನು ನೋಡಿದರೆ ಅಲ್ಲಿನವರ ಸ್ಥಿತಿ ಗೊತ್ತಾಗುತ್ತದೆ. ಇನ್ನು ಖಂಡ್ರೆ ಅವರ ತಲೆಕೂದಲು ಮುಚ್ಚಿಕೊಂಡಿದ್ದರಿಂದ ಉಳಿದುಕೊಂಡಿದ್ದಾರೆ. ಅದೇ ಅವರ ನೆರಳು ಎಂದು ಜ್ಞಾನೇಂದ್ರ ನಾಲಿಗೆ ಹರಿಬಿಟ್ಟಿದ್ದಾರೆ. ಆಗರ ಜ್ಞಾನೇಂದ್ರ ಹೇಳಿಕೆಗೆ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ.
ಇದನ್ನೂ ಓದಿ: ಮೊಬೈಲ್ ಚಾರ್ಜರ್ ಬಾಯಿಗೆ ಇಟ್ಟುಕೊಂಡ 8 ತಿಂಗಳ ಕೂಸು – ಕರೆಂಟ್ ಶಾಕ್ ನಿಂದ ಕಂದಮ್ಮ ಸಾವು
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಮಲ್ಲಿಕಾರ್ಜುನ್ ಖರ್ಗೆಯವರ ಮೈಬಣ್ಣದ ಬಗ್ಗೆ ಅವಹೇಳನ ಮಾಡಿದ ಆರಗ ಜ್ಞಾನೇಂದ್ರ ಅವರು ಬಿಜೆಪಿಯ ಕೀಳು ಮಟ್ಟದ ಮನಸ್ಥಿತಿಯನ್ನು ಪ್ರತಿನಿಧಿಸಿದ್ದಾರೆ. ಬಿಜೆಪಿಯವರಲ್ಲಿ ದಲಿತರ ಬಗ್ಗೆ ಇರುವ ಅಸಹನೆ, ಅಸಡ್ಡೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ಕಿಡಿಕಾರಿದೆ
ಮೈಬಣ್ಣದ ಬಗೆಗಿನ ಈ ಅವಹೇಳನ ಕೇವಲ ಖರ್ಗೆಯವರನ್ನು ಅವಮಾನಿಸಿದ್ದಲ್ಲ, ಖರ್ಗೆಯವರ ಹೆಸರಲ್ಲಿ ಇಡೀ ಮೂಲನಿವಾಸಿ ದಲಿತರಿಗೆ ಮಾಡಿದ ಅವಮಾನ. ಬಣ್ಣದ ಬಗೆಗಿನ ಶೋಷಣೆ, ಅವಮಾನವನ್ನು ತೊಡೆದುಹಾಕಲು ಜಾಗತಿಕ ಮಟ್ಟದಲ್ಲಿ ಚಳವಳಿಗಳು ನಡೆದಿವೆ, ಪಾಶ್ಚಿಮತ್ಯ ದೇಶಗಳಲ್ಲಿ ಮೈಬಣ್ಣದ ಬಗ್ಗೆ, ದೈಹಿಕ ರೂಪದ ಬಗ್ಗೆ ಅವಮಾನಿಸಿದರೆ ಮಹಾ ಅಪರಾಧಿಯಂತೆ ಕಾಣಲಾಗುತ್ತದೆ ಎಂದು ಟ್ವೀಟ್ನಲ್ಲಿ ಕಾಂಗ್ರೆಸ್ ಹೇಳಿಕೊಂಡಿದೆ.
ಆದರೆ ಇಲ್ಲಿನ ಬಿಜೆಪಿಗರು ದಲಿತರನ್ನು, ದಲಿತರ ಮೈಬಣ್ಣವನ್ನು, ರೂಪವನ್ನು ಅವಮಾನಿಸುವುದು ಹೆಗ್ಗಳಿಕೆಯಾಗಿ ನೋಡುತ್ತದೆ. ಬಿಜೆಪಿಗೆ ದಲಿತರ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ ಜ್ಞಾನೇಂದ್ರರನ್ನು ಉಚ್ಚಾಟನೆ ಮಾಡಬೇಕು, ಜ್ಞಾನೇಂದ್ರ ಅವರು ಮಲ್ಲಿಕಾರ್ಜುನ್ ಖರ್ಗೆಯವರ ಹಾಗೂ ದಲಿತರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದೆ.