ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಿದ ಜಡ್ಜ್ ನ ನಾಲಿಗೆ ಕತ್ತರಿಸ್ತೀನಿ – ಕಾಂಗ್ರೆಸ್ ನಾಯಕ ವಿವಾದಾತ್ಮಕ ಹೇಳಿಕೆ
ಚೆನ್ನೈ: ಮಾನನಷ್ಟ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ಮುಖಂಡರೊಬ್ಬರು ನಾಲಿಗೆ ಹರಿಬಿಟ್ಟಿದ್ದಾರೆ.
ಇದನ್ನೂ ಓದಿ: ಸ್ವಂತ ಮನೆಯಿಲ್ಲ ಎಂದ ‘ರಾಗಾ’ಗೆ ದೇವಸ್ಥಾನದಲ್ಲಿ ವಾಸ್ತವ್ಯ ಹೂಡಿ ಎಂದ ಅರ್ಚಕ!
2019ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ʻಮೋದಿʼ ಉಪನಾಮ ಬಳಸಿ ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಹೇಳಿಕೆಗಾಗಿ 2019ರಲ್ಲಿ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾರ್ಚ್ 23ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದರು.
ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ತಮಿಳುನಾಡಿನ ದಿಂಡಿಗಲ್‌ನಲ್ಲಿ ಕಾಂಗ್ರೆಸ್‌ನ ಎಸ್ಸಿ-ಎಸ್ಟಿ ವಿಭಾಗದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಮುಖ್ಯಸ್ಥ ಮಣಿಕಂದನ್, ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗ ರಾಹುಲ್ ಗಾಂಧಿ ಅವರಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ ನ್ಯಾಯಾಧೀಶರಾದ ಹೆಚ್.ವರ್ಮಾ ಅವರ ನಾಲಿಗೆ ಕತ್ತರಿಸುತ್ತೇನೆ ಅಂತಾ ನಾಲಿಗೆ ಹರಿಬಿಟ್ಟಿದ್ದಾರೆ. ಇದೀಗ ಮಣಿಕಂದನ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ದಿಂಡಿಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಕಾಂಗ್ರೆಸ್ ಮುಖಂಡನ ಹೇಳಿಕೆಗೆ ಪ್ರತಿಪಕ್ಷಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.