ರಾಜ್ಯ ಸರ್ಕಾರ  ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರು – ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಸಿಎಂ

ರಾಜ್ಯ ಸರ್ಕಾರ  ಸಿದ್ಧಪಡಿಸಿದ ಭಾಷಣ ಓದದ ರಾಜ್ಯಪಾಲರು – ಸುಪ್ರೀಂ ಮೊರೆ ಹೋಗುತ್ತೇವೆ ಎಂದ ಸಿಎಂ

ಜಂಟಿ ಅಧಿವೇಶನದಲ್ಲಿ ರಾಜ್ಯ ಸರ್ಕಾರ  ಸಿದ್ಧಪಡಿಸಿದ ಭಾಷಣ ಓದಲು ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅವರ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಲು ರಾಜ್ಯ ಸರ್ಕಾರ ಮುಂದಾಗಿದೆ. ಅಲ್ಲದೇ ರಾಜ್ಯಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಿಎಂ ಅವರು, ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ರಾಜ್ಯಪಾಲರು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ ಮಾಡಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡುವ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿ ವರ್ಷದ ಆರಂಭದಲ್ಲಿ ನಡೆಯುವ ಹಾಗೂ ಹೊಸ ಸರ್ಕಾರ ಸ್ಥಾಪನೆಗೊಂಡ ಸಂದರ್ಭದಲ್ಲಿ ನಡೆಸಲಾಗುವ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡುವುದು ಸಂವಿಧಾನದ ರೀತ್ಯಾ ಸನ್ಮಾನ್ಯ ರಾಜ್ಯಪಾಲರ ಕರ್ತವ್ಯವಾಗಿರುತ್ತದೆ. ಸಂವಿಧಾನ ಕಲಂ 176 ಮತ್ತು 163 ರಂತೆ ಸರ್ಕಾರದ ಸಚಿವ ಸಂಪುಟ ಸಿದ್ಧಪಡಿಸಿರುವ ಭಾಷಣವನ್ನು ಓದಲೇಬೇಕೆಂಬ ನಿಯಮವಿದ್ದು, ರಾಜ್ಯಪಾಲರು ತಾವೇ ಸಿದ್ಧಪಡಿಸಿದ ಭಾಷಣವನ್ನು ಓದುವಂತಿಲ್ಲ. ಇಂದು ವರ್ಷದ ಮೊದಲ ಜಂಟಿ ಅಧಿವೇಶನ ಮತ್ತು ವಿಶೇಷ ಅಧಿವೇಶನವನ್ನು ಕರೆಯಲಾಗಿತ್ತು. ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ) ರದ್ದುಪಡಿಸಿ, ವಿಬಿಜಿ ರಾಮ್ ಜಿ (ವಿಕಸಿತ ಭಾರತ – ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಎಂಬ ಕಾಯ್ದೆಯನ್ನು ಕೇಂದ್ರ ಸರ್ಕಾರ ಹೊಸದಾಗಿ ರಚಿಸಿದೆ. ಇದಕ್ಕೆ ನಮ್ಮ ಸರ್ಕಾರದ ತೀವ್ರ ವಿರೋಧವಿದೆ.

ಇದನ್ನೂ ಓದಿ;BMTC ಬಸ್‌ನಲ್ಲಿ 6 ರೂ. ಬದಲು 60 ಸಾವಿರ ಪಾವತಿಸಿದ ಪ್ರಯಾಣಿಕ! – ಮುಂದೇನಾಯ್ತು ಗೊತ್ತಾ?

ಮೊದಲನೆಯದಾಗಿ ಕಾಯ್ದೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯಲಾಗಿದೆ. 2005 ರಲ್ಲಿ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ, ಸಂವಿಧಾನ ನಿರ್ದೇಶನಗಳಂತೆ ಆಹಾರ ಭದ್ರತೆ, ಮಾಹಿತಿ ಹಕ್ಕು, ಶಿಕ್ಷಣ ಹಕ್ಕು, ಉದ್ಯೋಗದ ಹಕ್ಕು ಕಾಯ್ದೆಗಳನ್ನು ಜಾರಿಗೆ ತಂದಿದ್ದರು. ಬಡ ಕಾರ್ಮಿಕರಿಗೆ ಕನಿಷ್ಠ 100 ದಿನಗಳ ಕಾಲ ಉದ್ಯೋಗ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿದ್ದ ಈ ಕಾಯ್ದೆಯಿಂದ ದಲಿತರು, ಕಾರ್ಮಿಕರು ಮತ್ತು ಮಹಿಳೆಯರು ಮತ್ತು ಸಣ್ಣ ರೈತರಿಗೆ ಅನುಕೂಲವಾಗಿತ್ತು ಎಂದು ಸಿಎಂ ಹೇಳಿದರು.

Kishor KV