‘ನಾನು ಸಿಎಂ ಅಭ್ಯರ್ಥಿ, ಡಿಕೆಶಿಯೂ ಅಭ್ಯರ್ಥಿ.. ಆಯ್ಕೆ ಮಾಡೋದು ಶಾಸಕರು’ – ಸಿದ್ದು ಮಾತಿನ ಮರ್ಮವೇನು?
ಕಾಂಗ್ರೆಸ್ ನಲ್ಲಿ ನಾಯಕರ ಸಿಎಂ ರೇಸ್.. ರಾಜ್ಯ ರಾಜಕೀಯದಲ್ಲಿ ಸಂಚಲನ!
ರಾಜ್ಯ ರಾಜಕೀಯ ಅಖಾಡ ರಂಗೇರುತ್ತಿದೆ. ವಿಧಾನಸಭಾ ಚುನಾವಣಾ ರಣರಂಗಕ್ಕಾಗಿ ಮೂರೂ ಪಕ್ಷಗಳು ತಮ್ಮ ಸೇನಾನಿಗಳನ್ನ ಕಣಕ್ಕಿಳಿಸುತ್ತಿವೆ. ಕಾಂಗ್ರೆಸ್ ಕೂಡ ಈಗಾಗಲೇ 124 ಅಭ್ಯರ್ಥಿಗಳ ಹೆಸರನ್ನ ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಸೀಟ್ ಮೇಲೆ ಇಬ್ಬರು ಟವೆಲ್ ಹಾಕಿದ್ದು ಭಾರೀ ಚರ್ಚೆ ನಡೆಯುತ್ತಿದೆ. ಹೋದಲ್ಲಿ ಬಂದಲ್ಲೆಲ್ಲಾ ನಾನೇ ಮುಂದಿನ ಸಿಎಂ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಮತ್ತೊಂದೆಡೆ ವಿಧಾನಸೌಧದ ಮೂರನೇ ಮಹಡಿ ಮೇಲೆ ಕಣ್ಣಿಟ್ಟಿರುವ ಡಿ.ಕೆ ಶಿವಕುಮಾರ್ ನಿಮ್ಮ ಸೇವೆ ಮಾಡಲು ನನಗೆ ಶಕ್ತಿ ಕೊಡಿ ಅನ್ನುವ ಮೂಲಕ ನಾನೂ ಸಿಎಂ ಕುರ್ಚಿ ಆಕಾಂಕ್ಷಿ ಎನ್ನುತ್ತಿದ್ದಾರೆ. ಈ ನಡುವೆ ವಿಪಕ್ಷನಾಯಕ ಸಿದ್ದರಾಮಯ್ಯ ಸಿಎಂ ಆಯ್ಕೆ ವಿಚಾರವಾಗಿ ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನವೊಂದು ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ (Karkanataka Assembly Elections 2023) ಇನ್ನೊಂದೇ ತಿಂಗಳು ಬಾಕಿ ಉಳಿದಿದೆ. ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಬಾಕಿ ಇರುವ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹರಸಾಹಸ ಪಡುತ್ತಿದೆ. 2ನೇ ಪಟ್ಟಿ ಸಂಬಂಧ ಕಾಂಗ್ರೆಸ್(Congress) ಚುನಾವಣಾ ಸಮಿತಿ ಸಭೆಗೂ ಮುನ್ನವೇ ಸಿದ್ದರಾಮಯ್ಯ ಸಿಎಂ ಹುದ್ದೆ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ(DK Shivakumar) ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ. ಹೀಗಂತ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್ಡಿಟಿವಿ ವರದಿ ಮಾಡಿದೆ. ಸಿದ್ದರಾಮಯ್ಯನವರ ಈ ಹೇಳಿಕೆಯಿಂದ ಕಾಂಗ್ರೆಸ್ನಲ್ಲಿ ತಲ್ಲಣ ಸೃಷ್ಟಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ಮತ್ತೊಂದು ಹಂತ ತಲುಪುವ ಮುನ್ನವೇ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಇದಕ್ಕೆ ನವದೆಹಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ : ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿರುವ ಡಿಕೆಶಿಗೆ ಮತ್ತೊಂದು ಶಾಕ್ – ಶಿವಕುಮಾರ್ ವಿರುದ್ಧ ಎಫ್ ಐಆರ್!
ನವದೆಹಲಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ. ಪ್ರಜಾಭುಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸಿಎಂ ಆಯ್ಕೆ ಆಗಲಿದೆ. ಸುದ್ದಿವಾಹಿನಿಯಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾನ್ಯ ಅಂತ ಹೇಳಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗೇ ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದು ‘ನಾನು ಸಿಎಂ ಅಭ್ಯರ್ಥಿ ಎಂಬ ಹೇಳಿಕೆ ಸತ್ಯಕ್ಕೆ ದೂರವಾದ ಆರೋಪ. ಅಂತಹ ಹೇಳಿಕೆ ನೀಡಿಲ್ಲ, ನಾನು ಅಂತಹ ಸಣ್ಣತನದ ರಾಜಕಾರಣ ಮಾಡಲ್ಲ’ ಎಂದಿದ್ದಾರೆ.
ಮುಖ್ಯಮಂತ್ರಿ ಹುದ್ದೆಗೆ ನಾನು ಆಕಾಂಕ್ಷಿ. ಜತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಆಕಾಂಕ್ಷಿ. ಆದರೆ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಹುದ್ದೆ ನೀಡುವುದಿಲ್ಲ. ಚುನಾಯಿತರಾದ ಶಾಸಕರು ಸಿಎಂರನ್ನ ತೀರ್ಮಾನ ಮಾಡುತ್ತಾರೆ ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಖಾಸಗಿ ಸುದ್ದಿವಾಹಿನಿ ಎನ್ಡಿಟಿವಿ ವರದಿ ಮಾಡಿತ್ತು. ಅಲ್ಲದೆ, ತಮ್ಮ ಕೋಲಾರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಒಪ್ಪಿದರೆ ಮಾತ್ರ ಕೋಲಾರದಿಂದಲೂ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ತಮಗೆ ಈಗಾಗಲೇ ವರುಣಾ ಕ್ಷೇತ್ರದಿಂದ ಟಿಕೆಟ್ ದೊರಕಿದ್ದು, ವರುಣದಿಂದಲೇ ಸ್ಪರ್ಧಿಸಲಿದ್ದೇನೆ. ಕೋಲಾರದಲ್ಲಿ ಸ್ಪರ್ಧಿಸಿದರೆ ಸುತ್ತಲಿನ 20 ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷಕ್ಕೆ ನೆರವಾಗಲಿದೆ ಎಂದು ಸ್ಥಳೀಯ ನಾಯಕರಿಂದ ಒತ್ತಾಯವಿದೆ. ಹೀಗಾಗಿ, ಈ ವಿಚಾರವನ್ನು ಹೈಕಮಾಂಡ್ಗೆ ತಿಳಿಸಿದ್ದೇನೆ. ಹೈಕಮಾಂಡ್ ಒಪ್ಪಿದರೆ ಮಾತ್ರ ಕೋಲಾರದಿಂದ ಸ್ಪರ್ಧಿಸುವೆ ಎಂದು ಸಿದ್ದರಾಮಯ್ಯ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿತ್ತು.
ಇನ್ನು ಕಾಂಗ್ರೆಸ್ ನಾಯಕರ ಸಿಎಂ ಕುರ್ಚಿ ಗುದ್ದಾಟಕ್ಕೆ ಬಿಜೆಪಿ ತಿರುಗೇಟು ನೀಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಹೀಗಾಗಿ ಇಲ್ಲದ ಸೀಟಿಗಾಗಿ ಅವರು ಕಿತ್ತಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.