ಶಿಂಧೆ ಬಣದ ಶಾಸಕರ ಅನರ್ಹತೆ ವಿಚಾರ – ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ಸುಪ್ರೀಂ ನೋಟಿಸ್
ಶಿವಸೇನೆಯ ಉದ್ಧವ್ ಠಾಕ್ರೆ ಬಣದ ನಾಯಕ ಸುನೀಲ್ ಪ್ರಭು ಅವರ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಸೇರಿದಂತೆ ಬಂಡಾಯ ನಾಯಕರ ಅನರ್ಹತೆ ವಿಚಾರವಾಗಿ ಸುಪ್ರೀಂ ಕೋರ್ಟ್ ಈ ಸೂಚನೆ ನೀಡಿದೆ. ಈ ಪ್ರಕರಣದ ಮುಂದಿನ ವಿಚಾರಣೆ 2 ವಾರಗಳ ನಂತರ ನಡೆಯಲಿದೆ.
ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಶಾಸಕರ ವಿರುದ್ಧ ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳ ಕುರಿತು ತ್ವರಿತ ನಿರ್ಧಾರ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್‌ಗೆ ನಿರ್ದೇಶನ ನೀಡುವಂತೆ ಕೋರಿ ಶಿವಸೇನೆಯ ಉದ್ಧವ್ ಠಾಕ್ರೆ ನೇತೃತ್ವದ ಬಣದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಉದ್ಧವ್ ಠಾಕ್ರೆ ಗುಂಪಿನ ನಾಯಕ ಸುನೀಲ್ ಪ್ರಭು ಮಾತನಾಡಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಮಿತ್ರರಾಗಿರುವ ಶಾಸಕರ ಅನರ್ಹತೆ ವಿಚಾರವು ಸ್ಪೀಕರ್ ಬಳಿ ಬಹಳ ದಿನಗಳಿಂದ ಬಾಕಿ ಉಳಿದಿದೆ. ಸ್ಪೀಕರ್ ಬೇಗ ನಿರ್ಧಾರ ತೆಗೆದುಕೊಳ್ಳುವಂತೆ ಕೇಳಿಕೊಳ್ಳುತ್ತೇವೆ. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ತ್ರಿಸದಸ್ಯ ಪೀಠವು ವಿಚಾರಣೆ ನಡೆಸುತ್ತಿದೆ. ಬಾಕಿ ಉಳಿದಿರುವ ಅನರ್ಹತೆ ಅರ್ಜಿಗಳನ್ನು ಸಮಂಜಸವಾದ ಅವಧಿಯೊಳಗೆ ತೀರ್ಮಾನಿಸಬೇಕು ಎಂದು ಮೇ 11 ರ ತೀರ್ಪಿನಲ್ಲಿ ಉನ್ನತ ನ್ಯಾಯಾಲಯದ ನಿರ್ದಿಷ್ಟ ನಿರ್ದೇಶನದ ಹೊರತಾಗಿಯೂ ಸ್ಪೀಕರ್ ಒಂದೇ ಒಂದು ವಿಚಾರಣೆಯನ್ನು ನಡೆಸಿರಲಿಲ್ಲ. ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಅನರ್ಹತೆಯ ವಿಷಯದ ಬಗ್ಗೆ ಉತ್ತರ ನೀಡುವಂತೆ ಉದ್ಧವ್ ಠಾಕ್ರೆ ಮತ್ತು ಶಿವಸೇನೆಯ ಸಿಎಂ ಏಕನಾಥ್ ಶಿಂಧೆ ಬಣದ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಶಿಂಧೆ ಬಣದ 40 ಮತ್ತು ಉದ್ಧವ್ ಪಾಳಯದ 14 ಶಾಸಕರಿಗೆ ನೋಟಿಸ್ ನೀಡಲಾಗಿದೆ ಎಂದು ವಿಧಾನಸಭಾ ಸ್ಪೀಕರ್ ನಾರ್ವೇಕರ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.