ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ! – ಮಾದಪ್ಪನ ಬೆಟ್ಟಕ್ಕೆ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ!
ಕರ್ನಾಟಕದ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದಿನಿಂದ ದೀಪಾವಳಿ ಜಾತ್ರೆ ಆರಂಭಗೊಂಡಿದೆ. ಹಬ್ಬದ ಹಿನ್ನೆಲೆಯಲ್ಲಿ ಭಕ್ತ ಸಾಗರವೇ ಹರಿದುಬರುತ್ತಿದೆ. ದೇಗುಲಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಈಗಾಗಲೇ ದೀಪಾವಳಿ ಜಾತ್ರೆ ಆರಂಭವಾಗಿದೆ. ನವೆಂಬರ್ 10 ರಿಂದ 14 ರ ವರೆಗೆ ಜಾತ್ರೆ ನಡೆಯುತ್ತಿದ್ದು, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರವು ಮಹಾ ರಥೋತ್ಸವಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಮಹದೇಶ್ವರನ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ದಾಸೋಹಾ ಕೂಡ ಇರಲಿದೆ.
ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ಕ್ಯೂನಲ್ಲಿ ನಿಂತಿದ್ದ ಭಕ್ತರಿಗೆ ಕರೆಂಟ್ ಶಾಕ್ – ಹಲವರಿಗೆ ಗಾಯ, ಬಾಲಕಿ ಸ್ಥಿತಿ ಗಂಭೀರ
ಜಾತ್ರೆ ಹಿನ್ನೆಲೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅದರಲ್ಲೂ ಬೆಂಗಳೂರು ಹಾಗೂ ಮೈಸೂರು ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಹೀಗಾಗಿ ಕಿರಿದಾದ ರಸ್ತೆಯಲ್ಲಿ ದ್ವಿಚಕ್ರ ವಾಹನ, ಆಟೋಗಳಿಗೆ ನಿರ್ಬಂಧ ವಿಧಿಸಲಾಗಿದೆ. ಸಂಚಾರ ದಟ್ಟಣೆಯಿಂದ ಬೆಟ್ಟದಲ್ಲಿ ಅಪಘಾತ ಸಂಭವಿಸುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಅಲ್ಲದೆ, ದ್ವಿಚಕ್ರ ವಾಹನ, ಆಟೋಗಳನ್ನು ತಾಳುಬೆಟ್ಟದಲ್ಲಿ ನಿಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಇದರ ಜೊತೆಗೆ, ದೇವಾಲಯಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಜಿಲ್ಲೆಯ ಎಲ್ಲಾ ಡಿಪ್ಪೋಗಳಿಂದ ಸುಮಾರು 500ಕ್ಕೂ ಹೆಚ್ಚು ಬಸ್ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.