ರಾಹುಲ್ ಗಾಂಧಿ ವಿರುದ್ಧ ಮತ್ತೊಂದು FIR ದಾಖಲು! – ಅರೆಸ್ಟ್ ಆಗ್ತಾರಾ ರಾಗಾ?
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕಾನೂನು ಸಂಕಷ್ಟ ನಿಲ್ಲುವಂತೆ ಕಾಣುತ್ತಿಲ್ಲ. ಒಂದಲ್ಲ ಒಂದು ವಿಚಾರವಾಗಿ ರಾಗಾ ಮೇಲೆ ಕೇಸ್ ದಾಖಲಾಗುತ್ತಲೇ ಇದೆ. ಇದೀಗ ರಾಹುಲ್ ಗಾಂಧಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ಅಸ್ಸಾಂ ಪೊಲೀಸರು ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಹೌದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸದ್ಯ ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಯಾತ್ರೆ ಅಸ್ಸಾಂನತ್ತ ಸಾಗಿದೆ. ಗುವಾಹಟಿಯ ಕೆಲ ರಸ್ತೆಗಳಲ್ಲಿ ರ್ಯಾಲಿಗೆ ನಿಷೇಧ ಹೇರಲಾಗಿತ್ತು. ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಬೆಂಬಲಿಗರು ಬ್ಯಾರಿಕೇಡ್ಗಳನ್ನು ಹತ್ತಿ ಪೊಲೀಸರ ಜೊತೆ ಘರ್ಷಣೆ ನಡೆಸಿದ್ದರು. ತಳ್ಳಾಟ-ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಕೆಲವು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿರೋ ಸಿಎಂ, ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ಕಿಡಿಕಾರಿದ್ದಾರೆ.