ಗಾನ ನಿಲ್ಲಿಸಿದ ಹಾಡುಹಕ್ಕಿ – ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ

ಗಾನ ನಿಲ್ಲಿಸಿದ ಹಾಡುಹಕ್ಕಿ – ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಇನ್ನಿಲ್ಲ

ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ (88) ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಸುಕ್ರಜ್ಜಿ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನರಾಗಿದ್ದಾರೆ.

ಇದನ್ನೂ ಓದಿ: ಸೀತಾ ಸುಬ್ಬಿ ಮಹಾ ಸಂಗಮ.. ಭಾರ್ಗವಿಗೆ ಮಾರಿ ಹಬ್ಬ? – ಸೀತಾರಾಮ ಸೀರಿಯಲ್‌ ಎಂಡ್‌?

ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು. ಬುಧವಾರ ತಡರಾತ್ರಿ ತನಕ ಕುಟುಂಬ ಸದಸ್ಯರ ಜೊತೆ ಸುಕ್ರಿ ಬೊಮ್ಮಗೌಡ ಮಾತುಕತೆ ನಡೆಸಿದ್ದರು. ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ಮಾಹಿತಿ ನೀಡಿದ್ದಾರೆ.

ಕಳೆದ ವರ್ಷವೂ ಉಸಿರಾಟದ ಸಮಸ್ಯೆಯ ಕಾರಣ ಮಂಗಳೂರು ನಗರದ ಅಂಬೇಡ್ಕರ್ ವೃತ್ತದ ಬಳಿ ಇರುವ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ ಹಾಗೂ ಆಗಾಗ ತಲೆ ಸುತ್ತುವ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು.

ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ, ಹಾಡುಹಕ್ಕಿ ಎಂದು ಖ್ಯಾತಿ ಪಡೆದಿದ್ರು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿದ್ದಾಗ ತಮ್ಮ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ ಒಕ್ಕಲಿಗ ಬುಡಕಟ್ಟಿನ ಸಾಂಪ್ರದಾಯಿಕ ಸಂಗೀತ ಹಾಡುಗಳನ್ನು ಸಂರಕ್ಷಿಸಿಕೊಂಡು ಹೋಗುವಲ್ಲಿ ಶ್ರಮಿಸಿದ್ದರು. ಹಾಡುಗಳು ಮಾತ್ರವಲ್ಲದೇ ವಿವಿಧ ಸಾಮಾಜಿಕ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿದ್ದರು.

ಇವರಲ್ಲಿರುವ ಅದ್ಭುತ ಹಾಡುಗಾರಿಕೆ ಕಲೆಯನ್ನು ಗುರುತಿಸಿದ್ದ ಭಾರತ ಸರ್ಕಾರ, 2017ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಪದ್ಮಶ್ರೀ ಮಾತ್ರವಲ್ಲದೇ, ಸ್ಥಳೀಯ ಬುಡಕಟ್ಟು ಜನಾಂಗದ ಸಂಸ್ಕೃತಿಯನ್ನು ಸಂರಕ್ಷಿಸಿದ್ದಕ್ಕಾಗಿ 1988ರಲ್ಲಿ ಕರ್ನಾಟಕ ಸರ್ಕಾರದಿಂದ ಪ್ರಶಸ್ತಿ, 1999ರಲ್ಲಿ ‘ಜಾನಪದ ಶ್ರೀ’ ಪ್ರಶಸ್ತಿ 2006ರಲ್ಲಿ ಕನ್ನಡ ವಿಶ್ವವಿದ್ಯಾಲಯದಿಂದ ನೀಡಲಾಗುವ ‘ನಾಡೋಜ’ ಗೌರವ ಹಾಗೂ 2009ರಲ್ಲಿ ಸಂದೇಶ ಕಲಾ ಪ್ರಶಸ್ತಿ, ಆಳ್ವಾಸ್ ನುಡಿಸಿ ಪ್ರಶಸ್ತಿ ಸೇರಿದಂತೆ ಅನೇಕ ಗೌರವಗಳು ಇವರಿಗೆ ಲಭಿಸಿದ್ದವು.

Shwetha M

Leave a Reply

Your email address will not be published. Required fields are marked *