ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು 

 ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು 

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿದ್ದ ಅವರು ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಯ ಕಾರ್ಡಿಯಾಕ್ ಸೈನ್ಸಸ್‌ ವಿಭಾಗದ ಅಧ್ಯಕ್ಷ ಖ್ಯಾತ ಕಾರ್ಡಿಯೋಥೊರಾಸಿಕ್ ಸರ್ಜನ್ ಡಾ ವಿವೇಕ್ ಜವಳಿ ಅವರು ಮಾಜಿ ಸಿಎಂ ಬೊಮ್ಮಾಯಿಯವರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಪ್ರಕ್ರಿಯೆ ಕೆಲವು ಗಂಟೆಗಳ ಕಾಲ ನಡೆದಿದ್ದು, ನಂತರ ಬೊಮ್ಮಾಯಿ ಅವರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಯಿತು. 63 ವರ್ಷದ ಬೊಮ್ಮಾಯಿಯವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ್ದು ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ:  ಪಡಿತರಕ್ಕಾಗಿ ಇನ್ನುಮುಂದೆ ನ್ಯಾಯಬೆಲೆ ಅಂಗಡಿಗೆ ತೆರಳಬೇಕಿಲ್ಲ! – ಮನೆಬಾಗಿಲಿಗೆ ಬರುತ್ತೆ ಅನ್ನಭಾಗ್ಯ ಪಡಿತರ ಅಕ್ಕಿ!

ಅವರು ಸದ್ಯ ವೆಂಟಿಲೇಟರ್‌ನಲ್ಲಿದ್ದು, ಇನ್ನು ಎರಡು ಮೂರು ದಿನಗಳಲ್ಲಿ ವಿಶೇಷ ವಾರ್ಡ್‌ಗೆ ಸ್ಥಳಾಂತರ ಮಾಡಲಾಗುವುದು.ಇಂದು ಸಂಜೆಯ ನಂತರ ಅವರು ಮಾತನಾಡಲು ಸಾಧ್ಯವಾಗಬಹುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಕೆಲ ವರ್ಷಗಳಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರುವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, “ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.” ಎಂದು ಟ್ವೀಟ್ ಮಾಡಿದ್ದಾರೆ.

Shwetha M