ಮಾಜಿ ಸಿಎಂ ಬೊಮ್ಮಾಯಿಗೆ ಮಂಡಿನೋವಿನ ಶಸ್ತ್ರಚಿಕಿತ್ಸೆ – ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬಹಳ ಸಮಯಗಳಿಂದ ಮಂಡಿನೋವಿನ ಬಾಧೆ ಕಾಡುತ್ತಿದೆ. ಮಂಡಿ ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಇತ್ತೀಚೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಹೋಗಿ ಅವರ ಆರೋಗ್ಯ ಯೋಗಕ್ಷೇಮ ವಿಚಾರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಬೊಮ್ಮಾಯಿಯವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಅವರೊಂದಿಗೆ ಗೃಹ ಸಚಿವ ಜಿ ಪರಮೇಶ್ವರ್ ಹಾಗೂ ಅವರ ರಾಜಕೀಯ ಕಾರ್ಯದರ್ಶಿಗಳು ಇದ್ದರು.
ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡದ 5 ಗೀತೆಗಳ ಗಾಯನ ಕಡ್ಡಾಯ – ರಾಜ್ಯ ಸರ್ಕಾರ ಆದೇಶ!
ಮೊಣಕಾಲು ನೋವಿನಿಂದ ಬಳಲುತ್ತಿದ್ದ ಬೊಮ್ಮಾಯಿ ಅವರನ್ನು ಇತ್ತೀಚೆಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.
ಶಸ್ತ್ರ ಚಿಕಿತ್ಸೆಯ ನಂತರ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದರು. ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೆ ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ. ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.