ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ – ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಹಾಡಿಹೊಗಳಿದ ಗೆಹ್ಲೋಟ್!
ರಾಜ್ಯ ಬಜೆಟ್ ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಿದೆ. ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಿದ್ದಾರೆ. ‘ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ಬಣ್ಣಿಸಿದ್ದಾರೆ.
ಸೋಮವಾರ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು, ‘ಇಡೀ ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ. ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ. ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಯುವನಿಧಿ ಯೋಜನೆ, ಗೃಹಲಕ್ಷ್ಮೀ ಯೋಜನೆ, ಗೃಹಜ್ಯೋತಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ರಫಾ ನಿರಾಶ್ರಿತರ ಮೇಲೆ ಮತ್ತೆ ದಾಳಿ ಮಾಡಿದ ಇಸ್ರೇಲ್ – 37 ಮಂದಿ ಸಾವು
ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ. ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ.
ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಬಜೆಟ್ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಹೇಳಿದರು.
ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆಯ ಜಿಲ್ಲಾಧಿಕಾರಿ ಉಪವಿಭಾಗಾಧಿಕಾರಿಗಳಲ್ಲಿ ಒಟ್ಟು 93,350 ಪ್ರಕರಣಗಳು ಬಾಕಿ ಇದ್ದು, ಈ ಪೈಕಿ 2024 ರ ಫೆಬ್ರವರಿ 5 ರ ವರೆಗೆ 84,253 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. 5787 ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.
ಮಂಗಳವಾರದಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.