ಕಾವೇರಿ ಪ್ರತಿಭಟನೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಿದ್ರೆ ಕಠಿಣ ಕ್ರಮ – ಹೋರಾಟಗಾರರಿಗೆ ಗೃಹ ಸಚಿವರ ಎಚ್ಚರಿಕೆ!
ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ತೀರ್ಪು ಹೊರ ಬಂದ ಬೆನ್ನಲ್ಲೇ ರಾಜ್ಯದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ವಿರುದ್ಧ ತೀವ್ರ ವ್ಯಕ್ತವಾಗಿದೆ. ಮಂಡ್ಯ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರಿಗೆ ಕಾವೇರಿ ನೀರು ಸರಬರಾಜು ಮಾಡುವ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿರುವ ಪಂಪ್ ಹೌಸ್ಗೆ ವಿವಿಧ ಕನ್ನಡಪರ ಸಂಘಟನೆಗಳು ಮುತ್ತಿಗೆ ಹಾಕಿ ಬೆಂಗಳೂರಿಗೆ ನೀರು ಸರಬರಾಜು ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಶನಿವಾರ ಮಂಡ್ಯ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನಲೆ ಪ್ರತಿಭಟನಾಕಾರರಿಗೆ ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸುವಂತೆ ಪಟ್ಟು – ಮಂಡ್ಯದ ಪಂಪ್ ಹೌಸ್ ಗೆ ಮುತ್ತಿಗೆ ಹಾಕಿ ಸಂಘಟನೆಗಳ ಆಕ್ರೋಶ
ಮಂಡ್ಯ ಬಂದ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಪರಮೇಶ್ವರ್, ಈಗಾಗಲೇ ಕೆಆರ್‌ಎಸ್, ಮಂಡ್ಯ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ. ಹೆಚ್ಚುವರಿ ಕೆಎಸ್‌ಆರ್‌ಪಿ, ಆರ್‌ಎಎಫ್ ತುಕಡಿಯನ್ನ ನಿಯೋಜನೆ ಮಾಡಲಾಗಿದೆ. ಪ್ರತಿಭಟನೆ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಪ್ರತಿಭಟನೆ ಮಾಡುವವರು ಕಾನೂನು ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಒಂದು ವೇಳೆ ಆ ರೀತಿ ಮಾಡಿದ್ರೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದ ಹಿತ ಕಾಪಾಡಬೇಕು ನೀರು ಬಿಡಬಾರದು ಅಂತ ಹೇಳಿ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಬಂದ್, ಪ್ರತಿಭಟನೆ ಮಾಡುವುದು ಅವರ ಹಕ್ಕು. ಯಾರು ಬೇಕಾದ್ರು ಪ್ರತಿಭಟನೆ ಮಾಡಬಹುದು. ಅದರಲ್ಲಿ ತಪ್ಪಿಲ್ಲ. ಆದರೆ ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಾಶ ಮಾಡೋದು, ಜನ ಸಮುದಾಯಕ್ಕೆ ತೊಂದರೆ ಮಾಡೋದು ಮಾಡಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಸುಪ್ರೀಂ ತೀರ್ಪಿನ ಕುರಿತು ಪ್ರತಿಕ್ರಿಯಿಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಬಗ್ಗೆ ಇವತ್ತಿನ ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡುತ್ತೇವೆ. ಸುಗ್ರಿವಾಜ್ಞೆ ತರೋ ವಿಚಾರದ ಬಗ್ಗೆಯೂ ಚರ್ಚೆ ನಡೆಯಬಹುದು. ಸಿಎಂ ಮತ್ತು ನೀರಾವರಿ ಸಚಿವರು ದೆಹಲಿಗೆ ಹೋಗಿ ಬಂದಿದ್ದಾರೆ. ಎಲ್ಲಾ ವಿಚಾರಗಳ ಬಗ್ಗೆ ಕ್ಯಾಬಿನೆಟ್‌ನಲ್ಲಿ ಬ್ರೀಫ್ ಮಾಡೋ ಸಾಧ್ಯತೆ ಇದೆ. ಇವತ್ತು ಕ್ಯಾಬಿನೆಟ್ ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದರು.