ಮಂಡ್ಯದಿಂದ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ! – ಜೆಡಿಎಸ್ ಲೆಕ್ಕಾಚಾರ ಏನು?
ಲೋಕಸಭೆ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಈ ಮೈತ್ರಿ ಕೂಟದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದೇ ಸದ್ಯ ಬಹಳಷ್ಟು ಕುತೂಹಲ ಮೂಡಿಸಿರುವ ಪ್ರಶ್ನೆ. ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ವದಂತಿಗಳ ಮಧ್ಯೆ, ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಸುಮಲತಾ ಅಂಬರೀಶ್ ಕೂಡ ಬಿಜೆಪಿ ಟಿಕೆಟ್ಗೆ ಪೈಪೋಟಿ ನಡೆಸುತ್ತಿದ್ದಾರೆ. ಆದ್ರೆ ಇದೀಗ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಅವರೇ ಮಂಡ್ಯದಿಂದ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್ಗಳಿಗೆ ಫಿಲ್ ಡಿಮ್ಯಾಂಡ್ – ಅಬ್ಬಬ್ಬಾ ಬಾಡಿಗೆ ಇಷ್ಟೊಂದಾ?
ಹೌದು, ಲೋಕಸಭೆ ಚುನಾವಣೆಗೆ ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್ ಆಗಿದೆ ಎಂದು ಹೇಳಲಾಗುತ್ತಿದೆ. ಸೋಮವಾರ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲೂ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಚರ್ಚೆ ನಡೆದಿತ್ತು. ಸಭೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಲು ಎಲ್ಲಾ ನಾಯಕರು ಒಪ್ಪಿಗೆ ನೀಡಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ನಿಂದಲೂ ಕುಮಾರಸ್ವಾಮಿ ಸ್ಪರ್ಧೆಗೆ ಸಮ್ಮತಿ ಸಿಕ್ಕಿದೆ. ಹೀಗಾಗಿ ಮಾರ್ಚ್ 25ಕ್ಕೆ ಕುಮಾರಸ್ವಾಮಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗುವ ಸಾಧ್ಯತೆಯಿದೆ.
ಮಂಗಳವಾರ ಕುಮಾರಸ್ವಾಮಿ ಚೆನ್ನೈಗೆ ತೆರಳಲಿದ್ದು ಮಾರ್ಚ್ 21 ರಂದು ಆಪರೇಷನ್ ನಡೆಯಲಿದೆ. ಆಪರೇಷನ್ ಮುಗಿಸಿದ ಬಳಿಕ ಮಂಡ್ಯದಲ್ಲಿ ಬೃಹತ್ ಸಭೆ ಆಯೋಜನೆಯಾಗಲಿದೆ. ಈ ಸಭೆಯ ಮೂಲಕ ಅಧಿಕೃತ ಚುನಾವಣಾ ಅಖಾಡಕ್ಕೆ ಹೆಚ್ಡಿಕೆ ಧುಮುಕಲಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆ ಸಂಬಂಧ ಕಳೆದ ವಾರ ಮಂಡ್ಯದಲ್ಲಿ ನಡೆದ ಸಭೆಯಲ್ಲಿ ನೀವೇ ಕಣಕ್ಕೆ ಇಳಿಯಬೇಕು ಇಲ್ಲದಿದ್ದರೆ ನಿಖಿಲ್ ಕುಮಾರಸ್ವಾಮಿ ಕಣಕ್ಕೆ ಇಳಿಯಬೇಕು ಎಂದು ಕುಮಾರಸ್ವಾಮಿ ಅವರಿಗೆ ಒತ್ತಡ ಹಾಕಿದ್ದರು.