ಬೆಂಗಳೂರು ಸೇರಿ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಮಳೆರಾಯನ ಆರ್ಭಟ

ಬೆಂಗಳೂರು ಸೇರಿ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 3-4 ದಿನ ಮಳೆರಾಯನ ಆರ್ಭಟ

ರಾಜ್ಯದ ಮಳೆಯ ಆರ್ಭಟ ಮುಂದುವರಿದ್ದು, ಮುಂದಿನ 3 -4 ದಿನ ಮತ್ತಷ್ಟು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನೀಡಿರುವ ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ರಿಂದ ಮೂರು ದಿನಗಳಲ್ಲಿ ಕರ್ನಾಟಕದಾದ್ಯಂತ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ವಿಶೇಷವಾಗಿ ಬೆಂಗಳೂರು, ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಮತ್ತು ಗುರುವಾರ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಅವಧಿಯಲ್ಲಿ ಬಹುತೇಕ ಕಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗಲಿದೆ. ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಗುರುವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನಿಂದಲೂ ಮೋಡ ಕವಿದ ವಾತಾವರಣವಿದ್ದು, ಹಗಲಿನಲ್ಲೇ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ ಸುಮಾರು 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ತಾಪಮಾನ 21 ಡಿಗ್ರಿ ಸೆಲ್ಸಿಯಸ್​ ಹತ್ತಿರ ಉಳಿಯುವ ನಿರೀಕ್ಷೆ ಇದೆ. ಗಾಳಿಯ ವೇಗ ಗಂಟೆಗೆ ಸುಮಾರು 20 ಕಿಲೋಮೀಟರ್​ ತಲುಪುವ ಸಾಧ್ಯತೆ ಇದೆ.

ರಾಜ್ಯದ ಹಲವೆಡೆ ಮಳೆ ಕೊರತೆ

ಇನ್ನೂ ಕಳದ ಸಲಕ್ಕೆ ಹೋಲಿಸಿದ್ರೆ ಈ ಸಲ ಮಳೆಯ ಪ್ರಮಾಣ ಬಹಳ ಕಡಿಮೆ ಆಗಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ದೇಶದ ಶೇಕಡಾ 65 ರಷ್ಟು ಭಾಗದಲ್ಲಿ ಭಾರಿ ಮಳೆ ಕೊರತೆಯಾಗಿದ್ದು, ಒಟ್ಟಾರೆ ಶೇಕಡಾ 32 ರಷ್ಟು ಇಳಿಕೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಹಲವು ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳದ ಕಾರಣ ಬಿತ್ತನೆ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ. ಅರಬ್ಬಿ ಸಮುದ್ರದಿಂದ ಬರುತ್ತಿರುವ ಗಾಳಿಯಲ್ಲಿ ಸಾಕಷ್ಟು ತೇವಾಂಶ ಇಲ್ಲದ ಕಾರಣ ನಿರೀಕ್ಷಿತ ಪ್ರಮಾಣದ ಮಳೆಯಾಗುತ್ತಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದು ರೈತರ ಆತಂಕಕ್ಕೆ ಕಾರಣವಾಗಿದೆ.

Kishor KV