ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶಾಕ್! – SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕ ಕೊಡುವಂತೆ ಕೋರ್ಟ್ ನಿರ್ದೇಶನ

ಎಸ್ಎಸ್ಎಲ್ಸಿ ಪರೀಕ್ಷೆಗೆ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು. ಆದ್ರೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಪ್ರಸಕ್ತ ಸಾಲಿನಿಂದಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: ಜಾನು ಬಲೆಯಲ್ಲಿ ಜಯಂತ್ ವಿಲ ವಿಲ.. ಜಾಹ್ನವಿ ಸೇಡು ಸೈಕೋಪತಿ ಸುಸ್ತು! -ಚಿನ್ನುಮರಿ ತಿರುಗೇಟಿಗೆ ಬದಲಾದ ಜಯಂತ್!
2025-2026ನೇ ಸಾಲಿನ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಗ್ರೇಡಿಂಗ್ ವ್ಯವಸ್ಥೆಯನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಸರ್ಕಾರಕ್ಕೆ ಈ ಸೂಚನೆ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.
ಇದಕ್ಕೂ ಮುನ್ನ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಆರ್.ವಿ. ನಾಯ್ಕ್ ವಾದ ಮಂಡಿಸಿ, 2025-2026ನೇ ಸಾಲಿನಿಂದಲೇ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವುದಾಗಿ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹೇಳಿಕೆ ನೀಡಿದ್ದಾರೆ. ಅಲ್ಲದೆ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(ಕೆಎಸ್ಇಎಬಿ) ಮುಖ್ಯಸ್ಥರು 2024 ಅ.18 ಮತ್ತು 2025ರ ಅ.28ರಂದು ಮಾರ್ಗಸೂಚಿ ಹಾಗೂ ಸುತ್ತೋಲೆ ಹೊರಡಿಸಿದ್ದರು. ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕ ನೀಡಬೇಕು. ಅದರಲ್ಲಿ ಲಿಖಿತ ಪರೀಕ್ಷೆಯ ಮೌಲ್ಯ ಮಾಪನದಲ್ಲಿ 80 ಅಂಕ, ಶಾಲಾ ಆಂತರಿಕ ಪರೀಕ್ಷೆ 20 ಅಂಕ ನೀಡಬೇಕು ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ. ಆದರೆ, ಕೊನೆ ಹಂತದಲ್ಲಿ ಅಂದರೆ ಎಸ್ಎಸ್ಎಸ್ಸಿ ಪರೀಕ್ಷೆ ನಡೆಯುತ್ತಿರುವ ಸಮಯದಲ್ಲಿ ಸರ್ಕಾರ ಅಂಕಗಳ ಬದಲಿಗೆ ಗ್ರೇಡ್ ನೀಡುವ ತೀರ್ಮಾನ ಕೈಗೊಂಡಿದೆ ಎಂದು ಪೀಠಕ್ಕೆ ವಿವರಿಸಿದರು.
ಹಾಗೆಯೇ, ಯುಪಿಎಸ್ಸಿ ಸೇರಿದಂತೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಸ್ವಾಮ್ಯದ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿ ಗ್ರೇಡಿಂಗ್ ಅನ್ನು ಪರಿಗಣಿಸುವುದಿಲ್ಲ. ಕೇವಲ ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ. ರಾಜ್ಯ ಸರ್ಕಾರ ಹಿಂದಿ ಹಾಗೂ ಇತರೆ ತೃತೀಯ ಭಾಷಾ ವಿಷಯಗಳ ಪರೀಕ್ಷೆಯಲ್ಲಿ ಅಂಕಗಳ ಬದಿಲಿಗೆ ಗ್ರೇಂಡಿಗ್ ನೀಡಿದರೆ, ರಾಜ್ಯದ ವಿದ್ಯಾರ್ಥಿಗಳ/ಉದ್ಯೋಗ ಆಕಾಂಕ್ಷಿಗಳ ಮೇಲೆ ಭವಿಷ್ಯದಲ್ಲಿ ಸಾಕಷ್ಟು ದುಷ್ಪರಿಣಾಮ ಬೀರುತ್ತದೆ. ಆದ್ದರಿಂದ 2025-2026ನೇ ಸಾಲಿನ ಎಸ್ಎಸ್ಎಸ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನೇ ನೀಡಲು ಸರ್ಕಾರ ಹಾಗೂ ಕೆಎಸ್ಇಎಬಿಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಪೀಠ, ತೃತೀಯ ಭಾಷೆ ವಿಷಯಗಳ ಪರೀಕ್ಷೆಯಲ್ಲಿ ಗ್ರೇಡಿಂಗ್ ನೀಡುವ ಬಗ್ಗೆ ರಾಜ್ಯ ಸರ್ಕಾರ ನೋಟಿಫಿಕೇಷನ್/ಸುತ್ತೋಲೆ ಹೊರಡಿಸಿದೆಯೇ ಎಂದು ಸರ್ಕಾರಿ ವಕೀಲರನ್ನು ಕೇಳಿತು. ಸರ್ಕಾರಿ ವಕೀಲರು, ಈ ಕುರಿತು ಸರ್ಕಾರದಿಂದ ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ಅಂಶ ಪರಿಗಣಿಸಿದ ಪೀಠ, 2025-2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಕುರಿತು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ನೀಡಿದ್ದ ಹೇಳಿಕೆಗೆ ಆಕ್ಷೇಪಿಸಿ ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠ ಇತ್ತೀಚೆಗೆ ರದ್ದುಪಡಿಸಿ ಆದೇಶಿಸಿತ್ತು.

ನೋಡಿರಿ

