ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ – ಗಡುವು ವಿಸ್ತರಿಸುತ್ತಾ ಸರ್ಕಾರ?
ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ಆದರೆ ನಂಬರ್ ಪ್ಲೇಟ್ ಅಳವಡಿಕೆಗೆ ವಾಹನ ಸವಾರರು ನಿರಾಸಕ್ತಿ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಕರ್ನಾಟಕದಲ್ಲಿ ಸುಮಾರು 2 ಕೋಟಿ ಹಳೆಯ ವಾಹನಗಳು ನೋಂದಣಿಯಾಗಿವೆ. 2 ಕೋಟಿ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ 10ಕ್ಕಿಂತ ಕಡಿಮೆ) ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರ ನೀಡುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೆ ಎಚ್‌ಎಸ್‌ಆರ್‌ಪಿ ಅಳವಡಿಸಲು ನೀಡಿರುವ ಗಡುವನ್ನು ವಿಸ್ತರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ರಮ್ಯಾ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್!
ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭದ್ರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮತ್ತು ವಾಹನಗಳ ದುರುಪಯೋಗವನ್ನು ತಡೆಯಲು ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದರೆ ನಂತರ ತೆಗೆಯಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಸಾಧ್ಯವಾಗುವುದಿಲ್ಲ. ಏಪ್ರಿಲ್ 1, 2019 ಕ್ಕೂ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಈ ನಂತರ ನೋಂದಣಿಯಾದ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.