ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ  – ರೆಡ್ ಅಲರ್ಟ್‌ ಘೋಷಣೆ

ಕರಾವಳಿಯಲ್ಲಿ ಮುಂದುವರಿದ ಮಳೆ ಆರ್ಭಟ  – ರೆಡ್ ಅಲರ್ಟ್‌ ಘೋಷಣೆ

ಬೆಂಗಳೂರು: ಕರಾವಳಿಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಸೋಮವಾರ ಸಂಜೆಯಿಂದ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಬುಧವಾರ ಕೂಡ ಕರಾವಳಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಸಾರ್ವಜನಿಕರು ಎಚ್ಚರವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: ಫ್ರೀ ಬಸ್‌ ಎಫೆಕ್ಟ್‌ – ಅಪ್ಪು ಸಮಾಧಿ ದರ್ಶನಕ್ಕೆ ಹರಿದು ಬರುತ್ತಿದೆ ಜನಸಾಗರ

ಇನ್ನು ಬೆಂಗಳೂರಿನ ಕಾರ್ಪೊರೇಷನ್ ವೃತ್ತ, ಗಿರಿನಗರ, ಬಸವನಗುಡಿ, ಜೆಸಿ ರಸ್ತೆ, ನಂಜಪ್ಪ ಸರ್ಕಲ್, ಜಯನಗರ ಸೇರಿದಂತೆ ಹಲವು ಕಡೆಗಳಲ್ಲಿ ಮಂಗಳವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿತ್ತು. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಶುಕ್ರವಾರ ಬೆಳಗಿನ ಜಾವದವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಬುಧವಾರ ಬೆಳಗಿನ ಜಾವದವರೆಗೆ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಗುರುವಾರ ಬೆಳಿಗ್ಗೆ 8.30 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ ಹೇರಿ ಒಂದು ತಿಂಗಳಾಗುತ್ತಾ ಬಂದಿದೆ. ಆದರೆ ಇದುವರೆಗೂ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆ ಪ್ರಾರಂಭವಾಗಿಲ್ಲ. ಜೂನ್‌ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬಾರದೇ ಇರುವುದರಿಂದ, ಮಾತ್ರವಲ್ಲದೆ ಇನ್ನೂ ಸಹ ಸಮುದ್ರದಲ್ಲಿ ತೂಫಾನ್‌ ಆಗದೇ ಇರುವುದರಿಂದ ಈ ಬಾರಿ ನಾಡದೋಣಿ ಮೀನುಗಾರಿಕೆ ಮತ್ತಷ್ಟು ವಿಳಂಬವಾಗಿ ಆರಂಭವಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಜೂನ್ ಮೊದಲ ವಾರದಲ್ಲಿ ಸಾಕಷ್ಟು ಮಳೆಯಾಗಿದ್ದರೆ ಜೂನ್ ಕೊನೆಯ ವಾರಕ್ಕೆ ತೂಫಾನ್‌ ಏಳುವ ಸಾಧ್ಯತೆ ಇತ್ತು. ಕಡಲಾಳದಲ್ಲಿ ತೂಫಾನ್‌ ಎದ್ದ ಬಳಿಕ ಕಡಲು ಪ್ರಕ್ಷುಬ್ಧಗೊಳ್ಳುತ್ತವೆ. ಇದರಿಂದ ನದಿ, ಹೊಳೆಗಳ ನೀರು, ಅದರೊಂದಿಗೆ ತ್ಯಾಜ್ಯವೆಲ್ಲ ಸಮುದ್ರಕ್ಕೆ ಸೇರುವುದರಿಂದ ಆಹಾರಕ್ಕಾಗಿ ವಿವಿಧ ಜಾತಿಯ ಮೀನುಗಳು ಕಡಲ ತೀರದತ್ತ ಧಾವಿಸುತ್ತವೆ. ಆದರೆ ಜೂನ್‌ನಲ್ಲಿ ಅಷ್ಟೊಂದು ಪ್ರಮಾಣದ ಮಳೆಯಾಗದೇ ಇರುವುದರಿಂದ ತೂಫಾನ್‌ ವಿಳಂಬಗೊಂಡಿದೆ. ಹೀಗಾಗಿ ನಾಡದೋಣಿ ಮೀನುಗಾರರು ಆತಂಕದಲ್ಲಿದ್ದಾರೆ.

suddiyaana