ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆಯಿಂದ ಭೀಕರ ದಾಳಿ – 90 ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು

ಗಾಜಾ ಜಾಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ಸೇನೆಯಿಂದ ಭೀಕರ ದಾಳಿ – 90 ಕ್ಕೂ ಅಧಿಕ ಪ್ಯಾಲೆಸ್ತೀನಿಯರು ಸಾವು

ಹಮಾಸ್‌ ಹಾಗೂ ಇಸ್ರೇಲ್‌ ನಡುವಿನ ಕದನ ದಿನೇ ದಿನೇ ತೀವ್ರ ಸ್ವರೂಪ ಪಡೆದಿದುಕೊಳ್ಳುತ್ತಿದೆ. ಹಮಾಸ್‌ ಬಂಡುಕೋರರನ್ನು ನಿರ್ನಾಮ ಮಾಡುವ ನಿಟ್ಟಿನಲ್ಲಿ ಇಸ್ರೇಲ್‌ ತನ್ನ ದಾಳಿಯನ್ನು ಮತ್ತಷ್ಟು ತೀವ್ರಗೊಳಿಸುತ್ತಿದೆ. ಇತ್ತೀಚೆಗೆ ಇಸ್ರೇಲ್ ಸೇನೆ  ಉತ್ತರ ಗಾಜಾದ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ನಡೆಸಿದ್ದ ದಾಳಿಯಲ್ಲಿ ಕನಿಷ್ಠ 90 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಮಳೆಯ ರೌದ್ರಾವತಾರ – ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತ, ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ

ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, ಜಬಾಲಿಯಾ ಪಟ್ಟಣದಲ್ಲಿರುವ ಅಲ್-ಬರ್ಶ್ ಮತ್ತು ಅಲ್ವಾನ್​​ಗಳಿಗೆ ಸೇರಿದ ವಸತಿ ಸಂಕೀರ್ಣಗಳ ಮೇಲೆ ಇಸ್ರೇಲ್‌ ಸೇನೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 90 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಅವಶೇಷಗಳಡಿಯಲ್ಲಿ ಹೆಚ್ಚಿನ ದೇಹಗಳು ಸಿಲುಕಿಕೊಂಡಿರಬಹುದು. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಕ್ಕಳು ಸೇರಿದಂತೆ ಗಾಯಗೊಂಡ ಅನೇಕ ಜನರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ಅಲ್ಲಿನ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ.

ಇನ್ನು ಇಸ್ರೇಲ್ ದಾಳಿಯಲ್ಲಿ ಮೃತಪಟ್ಟವರಲ್ಲಿ ಪ್ಯಾಲೆಸ್ತೀನ್ ಇಸ್ಲಾಮಿಕ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೆಹಾಬ್ ಅವರ ಪುತ್ರನೂ ಸೇರಿದ್ದಾನೆ ಎಂದು ಗುಂಪಿನ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ರಾಯಿಟರ್ಸ್‌ಗೆ ತಿಳಿಸಿದ್ದಾರೆ.

ಈ ಮಧ್ಯೆ, ಗಾಜಾದ ಮತ್ತೊಂದು ಕಡೆಯಲ್ಲಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ನಾಲ್ಕು ಜನ ಮೃತಪಟ್ಟಿದ್ದಾರೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ನಡೆಸಿದ ಹಠಾತ್ ದಾಳಿಯ ನಂತರ ಇಲ್ಲಿಯವರೆಗೆ ನಡೆದ ಸಂಘರ್ಷದಲ್ಲಿ 19,000 ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ.

ಏತನ್ಮಧ್ಯೆ, ದಕ್ಷಿಣ ಗಾಜಾದಲ್ಲಿ ಖಾನ್ ಯೂನಿಸ್ ಮತ್ತು ರಫಾ ನಗರಗಳನ್ನು ಗುರಿಯಾಗಿಟ್ಟುಕೊಂಡು ಇಸ್ರೇಲ್ ಪಡೆಗಳು ಫಿರಂಗಿ ಶೆಲ್ ದಾಳಿಯನ್ನು ತೀವ್ರಗೊಳಿಸಿವೆ. ಅಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯಾದವರು ಆಶ್ರಯ ಪಡೆದಿದ್ದಾರೆ. ವಿಶ್ವಸಂಸ್ಥೆಯ ಅಂದಾಜಿನ ಪ್ರಕಾರ, 1.9 ಮಿಲಿಯನ್ ಜನರು, ಗಾಜಾದ ಜನಸಂಖ್ಯೆಯ ಸುಮಾರು 80 ಪ್ರತಿಶತದಷ್ಟು ಜನರು ಯುದ್ಧದಿಂದಾಗಿ ಸ್ಥಳಾಂತರಗೊಂಡಿದ್ದಾರೆ.

 

Shwetha M