ರಾಜ್ಯದಲ್ಲಿ ರಂಗೇರಿದ ಉಪ ಚುನಾವಣಾ ಕಣ! – ಬಿಜೆಪಿ, ಕಾಂಗ್ರೆಸ್ ಶಕ್ತಿ ಪ್ರದರ್ಶನ.. ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ!

ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಕ್ಷೇತ್ರಗಳಲ್ಲೂ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಎರಡೂ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಸಿದ್ದೇಗೌಡ್ರಿಗೆ DKD ಫೈನಲ್ ಟಿಕೆಟ್.. ಶೋನಲ್ಲಿ ಗುಂಡಮ್ಮಗೆ ಮೋಸ ಆಯ್ತಾ? – ಡ್ಯಾನ್ಸ್ ಶೋ ಗೆಲ್ಲೋದು ಇದೇ ಜೋಡಿ?
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ್ ಕರಿಯಪ್ಪ ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಮೆರವಣಿಗೆ ಮುನ್ನವೇ ಶ್ರೀನಿವಾಸ್ ಕರಿಯಪ್ಪ ಅವರು ಪತ್ನಿ ಹಾಗೂ ಬಿಜೆಪಿ ಮುಖಂಡರ ಜೊತೆ ತೆರಳಿ ನಾಮಪತ್ರ ಸಲ್ಲಿಸಿದರು. ನಂತರ ದುರ್ಗಾಂಬಿಕಾ ದೇವಸ್ಥಾನದಿಂದ ಅದ್ಧೂರಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವರು ಭಾಗಿಯಾಗಿದ್ದರು.
ನಾಮಪತ್ರ ಸಲ್ಲಿಸಿ ಹೇಳಿಕೆ ನೀಡಿದ ಬಿಜೆಪಿ ಅಭ್ಯರ್ಥಿ, ಈ ಸಲ ದಾವಣಗೆರೆ ದಕ್ಷಿಣ ಕ್ಷೇತ್ರದ ಬದಲಾವಣೆ ಖಚಿತ. ಹಮಾಲಿ ಒಬ್ಬನ ಮಗ ರಾಜ್ಯದ ವಿಧಾನಸಭೆ ಪ್ರವೇಶ ಮಾಡೋದು ಖಚಿತ. ನನ್ನ ಪತಿಸ್ಪರ್ಧಿ ಕಾಂಗ್ರೆಸ್ ವಿನಃ ಯಾವುದೇ ಇಲ್ಲ. ಈ ಬಾರಿ ಭರವಸೆ ಇದೆ. ಬಿಜೆಪಿ ಗೆಲ್ಲಲಿದೆ ಎಂದು ಆಶಯ ವ್ಯಕ್ತಪಡಿಸಿದರು.

BJP ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ
ಇನ್ನು, ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಸಂಸದರಾದ ಜಗದೀಶ್ ಶೆಟ್ಟರ್, ಪಿ.ಸಿ. ಗದ್ದಿಗೌಡರ, ಗೋವಿಂದ ಕಾರಜೋಳ, ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ್ ಮತ್ತು ಮಾಜಿ ಸಚಿವ ಮುರುಗೇಶ್ ನಿರಾಣಿ ಉಪಸ್ಥಿತರಿದ್ದರು.
ವೀರಣ್ಣ ಚರಂತಿಮಠ ಅವರು ಇದೇ ಕ್ಷೇತ್ರದಿಂದ 2004, 2008 ಹಾಗೂ 2018ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದ ಹಿರಿಯ ನಾಯಕರಾಗಿದ್ದು, ಮತ್ತೊಮ್ಮೆ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ಬಿಜೆಪಿ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಯ ನಂತರ ನಗರದಲ್ಲಿ ಪಕ್ಷದ ವತಿಯಿಂದ ಬೃಹತ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಾರು ಕಾರ್ಯಕರ್ತರೊಂದಿಗೆ ನಡೆದ ಈ ಶಕ್ತಿ ಪ್ರದರ್ಶನದ ಬಳಿಕ ಬಹಿರಂಗ ಸಭೆಯನ್ನು ಆಯೋಜಿಸಲಾಗಿದ್ದು.

ಬಾಗಲಕೋಟೆ ಕ್ಷೇತ್ರದಿಂದ ಕೈ ಅಭ್ಯರ್ಥಿ ಉಮೇಶ್ ಮೇಟಿಯಿಂದ ನಾಮಪತ್ರ ಸಲ್ಲಿಕೆ!
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬೆಳಿಗ್ಗೆ ತಿಮ್ಮಾಪುರದಲ್ಲಿರುವ ತಮ್ಮ ತಂದೆ, ದಿವಂಗತ ಎಚ್. ವೈ. ಮೇಟಿ ಅವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ಕಿಲ್ಲಾ ರಾಘವೇಂದ್ರ ಸ್ವಾಮಿ ಮಠ ಹಾಗೂ ಪ್ರಸಿದ್ಧ ಕೊತ್ತಲೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸುತ್ತಿದ್ದಾರೆ. ಈ ಮೂಲಕ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇದೀಗ ಎರಡೂ ಪ್ರಮುಖ ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ಒಂದೇ ದಿನ ತಮ್ಮ ಉಮೇದುವಾರಿಕೆ ಸಲ್ಲಿಸಿ, ಘಟಾನುಘಟಿ ನಾಯಕರ ದಂಡನ್ನೇ ಕರೆತಂದಿರುವುದರಿಂದ ಬಾಗಲಕೋಟೆಯಲ್ಲಿ ಚುನಾವಣಾ ಕಣ ರಂಗೇರಿದೆ.

ದಾವಣಗೆರೆ ಕ್ಷೇತ್ರದಿಂದ ಕೈ ಅಭ್ಯರ್ಥಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ, ಶಾಸಕ ಶಾಮನೂರು ಶಿವಶಂಕರಪ್ಪ ಮೊಮ್ಮಗ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಸಿದರು. ಈ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರು ಉಪಸ್ಥಿತರಿದ್ದರು. ಇದೇ ವೇಳೆ ಒಗ್ಗಟ್ಟು ಪ್ರದರ್ಶಿಸಿದರು. ಅಲ್ಪಸಂಖ್ಯಾತರು ನಮ್ಮ ಜತೆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರೆ, ಮುಸ್ಲಿಮರು ಟಿಕೆಟ್ ಕೇಳಿದ್ದರಲ್ಲಿ ತಪ್ಪಿಲ್ಲ. ಆದರೆ ನಾವು ಒಗ್ಗಟ್ಟಾಗಿದ್ದೇವೆ, ಚುನಾವಣೆ ಗೆಲ್ಲುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
ಕಾಂಗ್ರೆಸ್ ಪಕ್ಷವು ಜಾತಿ, ಧರ್ಮದ ಆಧಾರದ ಮೇಲೆ ರಾಜಕೀಯ ಮಾಡುವುದಿಲ್ಲ. ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದ್ದು, ಇದು ಎಲ್ಲರನ್ನೂ ಒಳಗೊಳ್ಳುವ, ಸಮಗ್ರ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್. ಮಲ್ಲಿಕಾರ್ಜುನ್ ಪಕ್ಷಕ್ಕೆ ದಾವಣಗೆರೆಯಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.


ನೋಡಿರಿ

