ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು – ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ

ಸಿಎಂ ಸಿದ್ದರಾಮಯ್ಯ ಪತ್ನಿ ಆಸ್ಪತ್ರೆಗೆ ದಾಖಲು – ಸಿಎಂ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಮಂಗಳವಾರ ತಡರಾತ್ರಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರ ದೆಹಲಿ ಪ್ರವಾಸದ ಸಮಯ ಬದಲಾವಣೆಯಾಗಿದೆ.

ಇದನ್ನೂ ಓದಿ: ಬೆಂಗಳೂರು ಪೊಲೀಸರಿಂದ ಹೊಸ ಸೇವೆ – ಇನ್ಮುಂದೆ ವಾಟ್ಸ್ಆ್ಯಪ್ ಮೂಲಕವೂ ದೂರು ಸಲ್ಲಿಸಬಹುದು!

ಪತ್ನಿ ಅನಾರೋಗ್ಯದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಸಿದ್ದರಾಮಯ್ಯ ಅವರು ಬುಧವಾರ ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ನಂತರ ಬೆಳಗ್ಗೆ 11.30 ಗೆ ಹೆಚ್​ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.

ಬುಧವಾರ ಬೆಳಗ್ಗೆ ವಿಧಾನಸೌಧ ಮುಂದೆ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡ ನಂತರ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುವವರಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಅದರಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ಅದಕ್ಕೂ ಮುನ್ನ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ನಾಯಕರನ್ನು ಸಿಎಂ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

suddiyaana