ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆ! – ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಸರ್ಕಾರ

ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದ ಜೊತೆಗೆ ಮೊಟ್ಟೆ ಹಾಗೂ ಚಿಕ್ಕಿಯನ್ನು ವಿತರಣೆ ಮಾಡಲಾಗುತ್ತಿತ್ತು. ಆದ್ರೀಗ ಸರ್ಕಾರ ವಿದ್ಯಾರ್ಥಿಗಳಿಗೆ ನೀಡಲಾಗ್ತಿದ್ದ ಚಿಕ್ಕಿ ವಿತರಣೆಯನ್ನು ನಿಲ್ಲಿಸಿದೆ. ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀಳುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಿ ವಿತರಣೆಯನ್ನು ನಿಲ್ಲಿಸಲಾಗಿದೆ.
ಇದನ್ನೂ ಓದಿ: ರಾಜ್ಯದ ಜನರಿಗೆ ಮತ್ತೆ KMF ನಿಂದ ಶಾಕ್! – ನಂದಿನಿ ಹಾಲಿನ ದರ ಮತ್ತೆ ಹೆಚ್ಚಳ?
ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಚಿಕ್ಕಿಯಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಮತ್ತು ವಿತರಣೆಯ ಸಮಸ್ಯೆಗಳ ಕುರಿತು ಧಾರವಾಡ ಮತ್ತು ಕಲಬುರಗಿಯಲ್ಲಿನ ಶಿಕ್ಷಣ ಇಲಾಖೆ ಅಪರ ಆಯುಕ್ತರು ಇಲಾಖೆಗೆ ದೂರು ನೀಡಿದ್ದರು. ಇದರ ಬೆನ್ನಲ್ಲೇ ಕ್ರಮ ಕೈಗೊಳ್ಳಲಾಗಿದೆ. ಚಿಕ್ಕಿ ಸೇವನೆಯಿಂದ ಮಕ್ಕಳ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಕರ್ನಾಟಕ ಸರ್ಕಾರ ಈ ಕ್ರಮ ಕೈಗೊಂಡಿದೆ.
ವಿದ್ಯಾರ್ಥಿಗಳಿಗೆ ನೀಡುತ್ತಿರುವ ಚಿಕ್ಕಿಯಲ್ಲಿ ಹೆಚ್ಚುವರಿ ಅನ್ಸ್ಯಾಚುರೇಟೆಡ್ ಫ್ಯಾಟ್ ಮತ್ತು ಹೆಚ್ಚಿನ ಸಕ್ಕರೆ ಅಂಶ ಪತ್ತೆಯಾಗಿದೆ. ಇದ್ರಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಧಾರವಾಡದ ಅಪರ ಆಯುಕ್ತರು ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿದೆ. ಮಧ್ಯಾಹ್ನದ ಊಟ ಯೋಜನೆಯಡಿ ಶಾಲೆಗಳಲ್ಲಿ ಚಿಕ್ಕಿಗೆ ಬದಲಾಗಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ನೀಡಬೇಕೆಂದು ಇಲಾಖೆ ಆದೇಶಿಸಿದೆ.