ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ – 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ!

ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ – 6 ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ!

ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ಎರಡು ಮೂರು ದಿನಗಳಿಂದ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಸಾಕಷ್ಟು ಅವಾಂತರ ಸೃಷ್ಠಿಯಾಗಿದೆ. ಇನ್ನೂ ಎರಡು ದಿನ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ – ಅನಾಮಿಕನ ವಶಕ್ಕೆ ಪಡೆಯಲು SIT ಚಿಂತನೆ!

ಕರಾವಳಿ ಜಿಲ್ಲೆಗಳು ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗ್ತಿದೆ. ಇಂದು ಕೂಡ ಉಡುಪಿ, ಹಾಸನ, ಸಕಲೇಶಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಎರಡು ದಿನಗಳ ಕಾಲ ಮತ್ತೆ ಭಾರಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ದಾವಣಗೆರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕ್ಯಾಸಲ್​​ರಾಕ್, ಆಗುಂಬೆ, ಗೇರುಸೊಪ್ಪ, ಶೃಂಗೇರಿ, ಜಯಪುರ, ಮಂಕಿ, ಕೊಪ್ಪ, ಯಲ್ಲಾಪುರ, ಹೊನ್ನಾವರ, ಕಮ್ಮರಡಿ,ಕಳಸ, ಬಾಳೆಹೊನ್ನೂರು, ಅಂಕೋಲಾ, ಮೂಡುಬಿದಿರೆ, ಕಾರವಾರ, ಲೋಂಡಾದಲ್ಲಿ ಅತಿ ಹೆಚ್ಚು ಮಳೆಯಾಗಿದೆ.

ಇನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿರುವ ಕಾರಣ ಕೃಷ್ಣರಾಜಸಾಗರ ಜಲಾಶಯದಿಂದ 91 ಸಾವಿರ ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಳೆ ಮತ್ತೆ ಜಾಸ್ತಿಯಾದರೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಹೊರ ಬಿಡುವ ಸಾಧ್ಯತೆಯಿದೆ. 124.80 ಅಡಿ ಎತ್ತರದ ಜಲಾಶಯಕ್ಕೆ ಸದ್ಯ 70 ಸಾವಿರ ಕ್ಯೂಸೆಕ್‌ ನೀರು ಒಳ ಹರಿವಿದೆ. ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವ ಕಾರಣ ಜಲಾಶಯದ ಕೆಳ ಭಾಗದಲ್ಲಿರುವ ಜನರು ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು ಶ್ರೀರಂಗಪಟ್ಟಣದಲ್ಲಿರುವ 221 ವರ್ಷ ಹಳೆಯದಾದ ಬ್ರಿಟಿಷರ ಕಾಲದ ವೆಲ್ಲೆಸ್ಲಿ ಸೇತುವೆ ಯಾವುದೇ ಕ್ಷಣದಲ್ಲಿ ಮುಳುಗಡೆಯಾಗುವ ಸಾಧ್ಯತೆಯಿದೆ.

Shwetha M