ಇನ್ನೂ ಒಂದು ವಾರ ರಾಜ್ಯದಲ್ಲಿ ವಿಪರೀತ ಚಳಿ – ಹವಾಮಾನ ಇಲಾಖೆ ಮುನ್ಸೂಚನೆ

ಇನ್ನೂ ಒಂದು ವಾರ ರಾಜ್ಯದಲ್ಲಿ ವಿಪರೀತ ಚಳಿ – ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಕೆಲ ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಇನ್ನೂ ಒಂದು ವಾರ ರಾಜ್ಯಾದ್ಯಂತ ವಿಪರೀತ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರಿನಲ್ಲಿ  ಮೂರ್ನಾಲ್ಕು ದಿನಗಳಿಂದ ದಟ್ಟವಾದ ಮಂಜು ಆವರಿಸಿದೆ. ಬೆಂಗಳೂರಿನಲ್ಲಿ ಗುರುವಾರ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನವು 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ವಾರಾಂತ್ಯದ ವೇಳೆಗೆ ಬೆಂಗಳೂರಿನಲ್ಲಿ ತಾಪಮಾನ ಕನಿಷ್ಠ 16 ಡಿಗ್ರಿ ಸೆಲ್ಸಿಯಸ್‌ಗೆ ಏರಲಿದೆ.

ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 5ರಿಂದ 6 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಿರುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 14ರಿಂದ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಗರಿಷ್ಠ ತಾಪಮಾನ 29ರಿಂದ 30 ಡಿಗ್ರಿ ಸೆಲ್ಸಿಯಸ್ ಇರಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರದ ಆತಂಕ- ಕರ್ನಾಟಕದ ಗಡಿಭಾಗಗಳಲ್ಲಿ ಹೈಅಲರ್ಟ್

ಇನ್ನೂ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಶೀತ ಗಾಳಿ ಕಡಿಮೆಯಾಗಿದೆ. ಆದರೆ ಮುಂದಿನ ಐದು ದಿನಗಳಲ್ಲಿ ಮತ್ತೊಮ್ಮೆ ಚಳಿಯ ತೀವ್ರತೆ ಹೆಚ್ಚಾಗಲಿದೆ ಅಂತ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಜನವರಿ 20ರಿಂದ 22ರವರೆಗೆ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಾಧಾರಣ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಜನವರಿ 23 ಮತ್ತು ಜನವರಿ 26ರ ನಡುವೆ ಚಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಜನವರಿ 23 ರಿಂದ ಜನವರಿ 25 ಮತ್ತು 26 ರವರೆಗೆ ಪಂಜಾಬ್, ಹರಿಯಾಣ, ದೆಹಲಿ, ಉತ್ತರ ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

suddiyaana