ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ – ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದೇನು?

ನಂದಿನಿ ಹಾಲಿನ ದರ 5 ರೂ. ಹೆಚ್ಚಳಕ್ಕೆ ಚಿಂತನೆ – ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಹೇಳಿದ್ದೇನು?

ಬೆಂಗಳೂರು: ಕೆಎಂಎಫ್‌ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೇ ಭೀಮಾ ನಾಯ್ಕ್‌ ಅವರು ನಂದಿನಿ ಹಾಲಿನ ಬೆಲೆ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ. ರಾಜ್ಯದ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಹಾಲಿನ ದರವನ್ನು 5 ರೂಪಾಯಿ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಈ ಮೂಲಕ ರೈತರಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಹೆಚ್ಚಳ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಭೀಮಾನಾಯ್ಕ್‌ ಅವಿರೋಧವಾಗಿ ಆಯ್ಕೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಭೀಮಾ ನಾಯ್ಕ್‌ ಅವರು, ನಂದಿನಿ ಹಾಲು ರಾಷ್ಟ್ರಮಟ್ಟದ ಬ್ರಾಂಡ್ ಆಗಿದೆ.  ಖಾಸಗಿಯವರಿಗೆ ಸ್ಪರ್ಧೆ ನೀಡುವ ಕೆಲಸವನ್ನ ಕೆಎಂಎಫ್ ಮಾಡಲಿದೆ. ಹಾಲಿನ ದರ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸುತ್ತೇವೆ. ನಂತರ ತೀರ್ಮಾನ ಕೈಗೊಳ್ಳುತ್ತೇವೆ. ಎಲ್ಲಾ ಹಾಲು ಒಕ್ಕೂಟಗಳು 5 ರೂ. ದರ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ. ದರ ಹೆಚ್ಚಿಸುವುದಲ್ಲದೆ, ಗುಣಮಟ್ಟದ ಹಾಲು, ಮೊಸರು, ತುಪ್ಪ ಗ್ರಾಹಕರಿಗೆ ಒದಗಿಸಲು ಆದ್ಯತೆ ನೀಡಲಿದ್ದೇವೆ. ರೈತರಿಗೆ 5 ರೂ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಪ್ರೋತ್ಸಾಹಧನ ಮೊತ್ತವನ್ನು ಇನ್ನೂ 2 ರೂ.  ಹೆಚ್ಚಳ ಮಾಡುವ ಬಗ್ಗೆ ತೀರ್ಮಾನ ಇದೆ. ಆದ್ದರಿಂದ ಗ್ರಾಹಕರಿಕೆ ಮಾರಾಟ ಮಾಡುವ ನಂದಿನಿ ಹಾಲಿನ ಪ್ರತಿ ಲೀಟರ್ ಗೆ 5 ರೂ ಹೆಚ್ಚಳ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಭೀಮಾ ನಾಯ್ಕ್‌ ಹೇಳಿದ್ದಾರೆ.

ಇನ್ನು  ಹಾಲು ಉತ್ಪಾದಕರಿಗೆ ನೀಡುವ ಮೊತ್ತ ಏರಿಕೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸಹಕಾರ ಸಚಿವ ಕೆಎನ್‌ ರಾಜಣ್ಣ ಹೇಳಿದ್ದಾರೆ. ರೈತರಿಂದ ಖರೀದಿಸುವ ಹಾಲಿನ ದರ ಏರಿಕೆ ಬಗ್ಗೆ ಚಿಂತನೆ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿಯೂ ಉತ್ತಮವಾದ ಹೈನುಗಾರಿಕೆ ಇದೆ. ರೈತರಿಗೆ ಹೆಚ್ಚಿನ ಲಾಭ ನೀಡುವ ಕಡೆ ಗಮನ ಹರಿಸುತ್ತೇವೆ. ಮುಖ್ಯಮಂತ್ರಿಗಳ ಜತೆ ಚರ್ಚಿಸಿ ರೈತರಿಗೆ ಅನುಕೂಲವಾಗುವಂತೆ ಮಾಡುತ್ತೇವೆ. ನಂದಿನಿ ಹಾಲಿನ ದರ ಏರಿಕೆ ಬಗ್ಗೆಯೂ ಚರ್ಚೆ ಆಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಬಾಲಚಂದ್ರ ಜಾರಕಿಹೊಳಿ ಅವರ ಕೆಎಂಎಫ್ ಅಧ್ಯಕ್ಷ ಸ್ಥಾನ ಕೊನೆಗೊಂಡ ಹಿನ್ನೆಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ ದೊರೆತಿತ್ತು. ಈ ಸ್ಥಾನಕ್ಕೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಅಧ್ಯಕ್ಷ ಸ್ಥಾನಕ್ಕಾಗಿ ಯಾರೂ ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

suddiyaana