ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಕೊರತೆ – 82 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ!
ಮಂಡ್ಯ: ರಾಜ್ಯದಲ್ಲಿ ಈ ಬಾರಿ ಮುಂಗಾರು ಪೂರ್ವ ಮಳೆ ಕೈಕೊಟ್ಟಿದೆ. ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದರೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಸುರಿಯದೇ ಇರುವುದು ಈಗ ಆತಂಕಕ್ಕೆ ಕಾರಣವಾಗಿದೆ. ಇದರಿಂದಾಗಿ ರಾಜ್ಯದ ಹಲವು ಜಲಾಶಯಗಳಲ್ಲಿ ದಿನೇ ದಿನೇ ನೀರಿನ ಮಟ್ಟ ಕುಸಿಯುತ್ತಿದೆ.
ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಲ್ಲಿ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್ ಡ್ಯಾಂನಲ್ಲಿ 82 ಅಡಿ ನೀರು ಮಾತ್ರ ಸಂಗ್ರಹವಾಗಿದೆ. ಮುಂದಿನ ದಿನಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಇದರಿಂದಾಗಿ ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ 5 ದಿನ ಆರ್ಭಟಿಸಲಿದ್ದಾನೆ ವರುಣಾ – ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಇನ್ನು ಡ್ಯಾಂ ನಲ್ಲಿ ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡಿರುವುದರಿಂದ ಆ ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ. ಮುಂದಿನ ದಿನಗಳಲ್ಲಿ ಮಳೆ ಸರಿಯಾಗಿ ಬೀಳದೇ ಇದ್ದರೆ ನೀರಿನ ಕೃಷಿ ಚಟುವಟಿಕೆಗಳಿಗೂ ತೊಡಕು ಉಂಟಾಗುವ ಸಾಧ್ಯತೆ ಇದೆ.
ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಬೇಸಿಗೆ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿತ್ತು. ಆದರೆ ಈ ಭಾರಿ ಸರಿಯಾಗಿ ಮಳೆ ಬೀಳದೆ ನೀರಿನ ಮಟ್ಟ ಕುಸಿದಿದೆ. ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರಿಗೆ ಅಗತ್ಯವಿರುವಷ್ಟುನೀರು ಮಾತ್ರ ಸಂಗ್ರಹವಾಗಿದೆ. ಬೇಸಿಗೆ ಮುಗಿಯುವವರೆಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.