ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಶಾಕ್! – ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜಕೀಯ ನಿವೃತ್ತಿ

ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಗೆ ಶಾಕ್! – ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ರಾಜಕೀಯ ನಿವೃತ್ತಿ

ಕುಂದಾಪುರದ ವಾಜಪೇಯಿ ಎಂದೇ ಖ್ಯಾತರಾಗಿರುವ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಅನ್ನುವ ಮೂಲಕ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಶ್ರೀನಿವಾಸ್ ಶೆಟ್ಟಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ 5 ಬಾರಿ ಆಯ್ಕೆಯಾಗಿದ್ದರು.

ಪತ್ರಿಕಾ ಹೇಳಿಕೆಯಲ್ಲಿ ಏನಿದೆ?

ವಿಧಾನಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ಮಾಡಿ ನಿಷ್ಠೆಯಿಂದ ಜವಾಬ್ದಾರಿ ನಿಭಾಯಿಸಿದ್ದೇನೆ. ಕುಂದಾಪುರ ಬಹಳಷ್ಟು ಗ್ರಾಮೀಣ ಭಾಗಗಳನ್ನು ಹೊಂದಿರುವ ಕ್ಷೇತ್ರವಾಗಿದ್ದು, ಎಲ್ಲ ವರ್ಗದ ಮತದಾರರಿಗೂ ಬೇಡಿಕೆಗಳನ್ನು ಹೇಳಿಕೊಳ್ಳಲು ಅವಕಾಶ ಮಾಡಿಕೊಟ್ಟ, ನೋವು ಸಂಕಷ್ಟಗಳಿಗೆ ಸ್ಪಂದಿಸಿದ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಿದ ಸಂತೃಪ್ತಿ ಇದೆ.

ಐದೂ ಚುನಾವಣೆಗಳಲ್ಲಿ ದಾಖಲೆ ಮತಗಳ ಅಂತರದಿಂದ ಚುನಾಯಿಸಿದ ಕ್ಷೇತ್ರದ ಮತದಾರರನ್ನು ವಿಶ್ವಾಸಕ್ಕೆ ಪಡೆದು, ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸಿ ಪ್ರೀತಿ ವಿಶ್ವಾಸ ಗಳಿಸಿದ ಹೆಮ್ಮೆ ಇದೆ. ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿಗೆ ದುಡಿದಿರುವ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ, ಪ್ರಮುಖರಿಗೆ ಹಾಗೂ ಅಭಿಮಾನಿಗಳಿಗೆ ಚಿರ ಋಣಿಯಾಗಿರುತ್ತೇನೆ.

ಕ್ಷೇತ್ರದ ಅಭಿವೃದ್ಧಿಯ ವಿಚಾರದಲ್ಲಿ ಮಾರ್ಗದರ್ಶನ ನೀಡಿದ ಹಾಗೂ ಸಹಕಾರ ನೀಡಿದ ಪಕ್ಷದ ಪ್ರಮುಖರಿಗೆ, ಹಿರಿಯ ಕಿರಿಯ ಸ್ನೇಹಿತರಿಗೆ, ಅಧಿಕಾರಿಗಳಿಗೆ, ಮಾಧ್ಯಮದವರಿಗೆ ಹಾಗೂ ಕ್ಷೇತ್ರದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.

ಮತದಾರರು ನನ್ನ ಮೇಲಿಟ್ಟ ಪ್ರೀತಿ ಮತ್ತು ನಂಬಿಕೆಯೇ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಗಿದೆ. ಸಮಸ್ತ ಮತ ಬಾಂಧವರಿಗೂ ಕೃತಜ್ಞತೆ ಸಲ್ಲಿಸುತ್ತ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಬಿಜೆಪಿಯಿಂದ ಆಯ್ಕೆಯಾಗಲು ಅವಕಾಶ ಕೊಟ್ಟ ಪಕ್ಷಕ್ಕೂ ಹಾಗೂ ಪಕ್ಷೇತರನಾಗಿ ನಿಂತು ಗೆಲ್ಲಲು ಸಹಕರಿಸಿದವರಿಗೂ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದೇನೆ. ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಅಭ್ಯರ್ಥಿಗೆ ಮತದಾರರು ಸಹಕಾರ ನೀಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1999 ರಿಂದ 2018 ರವರೆಗೆ ಸತತ 5 ಬಾರಿ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಕುಂದಾಪುರದ ಶಾಸಕರಾಗಿ ಆಯ್ಕೆಯಾಗಿದ್ದರು. 2013 ರಲ್ಲಿ ಬಿಜೆಪಿ ವಿರುದ್ಧ ಸಿಟ್ಟಿಗೆದ್ದಿದ್ದ ಶ್ರೀನಿವಾಸ್ ಶೆಟ್ಟಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲ್ಲೋ ಮೂಲಕ ತಮ್ಮ ಶಕ್ತಿ ಪ್ರದರ್ಶಿಸಿದ್ದರು. 2018ರ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಸೇರಿ ಗೆದ್ದಿದ್ದ ಶಾಸಕ ಹಾಲಾಡಿ, ಈಗ ಚುನಾವಣಾ ಸ್ಪರ್ಧೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಕುಂದಾಪುರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲ ಘೋಷಿಸಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರ ನಡೆ ಕುತೂಹಲ ಮೂಡಿಸಿದೆ. ಇಷ್ಟೇ ಅಲ್ಲದೇ ಹಾಲಾಡಿಯವರ ದಿಢೀರ್ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿಯೂ ಭಾರೀ ಚರ್ಚೆಗೆ ಗ್ರಾಸವಾಗಿದೆ.

suddiyaana