ಧಾರ್ಮಿಕ ಕಾರ್ಯಕ್ರಮದ ವೇಳೆ ಶೆಡ್ ಮೇಲೆ ಬಿದ್ದ ಮರ – 7 ಮಂದಿ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ
ಮಹಾರಾಷ್ಟ್ರ: ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿರುವ ವೇಳೆ ಶೆಡ್ ಮೇಲೆ ಮರ ಬಿದ್ದು 7 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಅಕೋಲಾದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಭಾರಿ ಗಾಳಿ ಮಳೆ ಸುರಿಯುತ್ತಿತ್ತು. ಈ ವೇಳೆ ದೇವಾಲಯದಲ್ಲಿದ್ದ ಹಲವು ಭಕ್ತರು ತಗಡಿನ ಶೆಡ್ ನಲ್ಲಿ ಆಶ್ರಯ ಪಡೆಯುತ್ತಿದ್ದರು. ಈ ವೇಳೆ ಭಾರಿ ಗಾತ್ರದ ಬೇವಿನ ಮರ ಶೆಡ್ ಮೇಲೆ ಬಿದ್ದಿದೆ. ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: 15 ಲಕ್ಷ ಜನರನ್ನು ಕಾಡುತ್ತಿದೆ ‘ಹಿಕಿಕೋಮೊರಿ’ – ಏನಿದು ಐಸೋಲೇಷನ್ ಪ್ರವೃತ್ತಿ?
ಘಟನೆಯ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಮರವನ್ನು ಜೆಸಿಬಿ ಮೂಲಕ ತೆರವುಗೊಳಿಸಿ ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಿದ್ದಾರೆ. ಗಾಯಗೊಂಡವರನ್ನು ಅಕೋಲಾ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಾವಿಗೆ ಸಂತಾಪ ಸೂಚಿಸಿದ್ದು, ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮೃತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧೀಕ್ಷಕರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ. ಕೆಲ ಗಾಯಾಳುಗಳನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣ ಪುಟ್ಟ ಗಾಯಾಳುಗಳಿಗೆ ಬಾಳಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಾವು ಅವರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇವೆ ಎಂದು ಅಂತಾ ಹೇಳಿದ್ದಾರೆ.
ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದಾರೆ.