ಇಂದು ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ – ಕಾಂಗ್ರೆಸ್ ಹೈಕಮಾಂಡ್‌ ಗೆ ಕಗ್ಗಂಟಾಗಿರುವುದು ಏನು?

ಇಂದು ಕರ್ನಾಟಕದ ಮುಖ್ಯಮಂತ್ರಿ ಆಯ್ಕೆ – ಕಾಂಗ್ರೆಸ್ ಹೈಕಮಾಂಡ್‌ ಗೆ ಕಗ್ಗಂಟಾಗಿರುವುದು ಏನು?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ನಾಲ್ಕು ದಿನಗಳಾಗಿವೆ. ಆದರೂ ಕೂಡ ಮುಖ್ಯಮಂತ್ರಿ ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಇಂದು ದೆಹಲಿಯಲ್ಲಿ ಮತ್ತೊಂದು ಸುತ್ತಿನ ಮಹತ್ವದ ಸಭೆ ನಡೆಯಲಿದ್ದು ಅದರಲ್ಲಿ ಮುಖ್ಯಮಂತ್ರಿ ಆಯ್ಕೆ ಆಗುವ ನಿರೀಕ್ಷೆಯಿದೆ.

ಮಂಗಳವಾರ ಸಂಜೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ನಿವಾಸದಲ್ಲಿ ಪ್ರತ್ಯೇಕ ಮಾತುಕತೆ ನಡೆಸಿದ್ದರು. ಕರ್ನಾಟಕದ ಮುಖ್ಯಮಂತ್ರಿ ಆಯ್ಕೆಯ ವಿಚಾರದಲ್ಲಿ ಇಬ್ಬರ ಅಭಿಪ್ರಾಯವನ್ನೂ ಮಲ್ಲಿಕಾರ್ಜುನ ಖರ್ಗೆ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ತಮ್ಮನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಪಟ್ಟು ಹಿಡಿದಿದ್ದು, ಸಿಎಂ ಆಯ್ಕೆ ಪ್ರಕ್ರಿಯೆ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿದೆ.

ಇದನ್ನೂ ಓದಿ: ಶೆಟ್ಟರ್ ಭೇಟಿಯಾಗಿ ಪರಮೇಶ್ವರ್, ದಿನೇಶ್ ಧನ್ಯವಾದ ಸಲ್ಲಿಕೆ – ಪಕ್ಷ & ಸರ್ಕಾರದ ಮಟ್ಟದಲ್ಲಿ ಉನ್ನತ ಸ್ಥಾನದ ಭರವಸೆ!

ಕರ್ನಾಟಕದಲ್ಲಿ ಯಾರನ್ನು ಸಿಎಂ ಮಾಡಬೇಕು ಎನ್ನುವ ವಿಚಾರದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್‌ ನ ಹಿರಿಯ ನಾಯಕ ರಾಹುಲ್ ಗಾಂಧಿ ಜೊತೆಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ಅದಕ್ಕೂ ಮುನ್ನ ಡಿಕೆಶಿ ಮತ್ತು ಸಿದ್ದರಾಮಯ್ಯ ಜೊತೆಗೆ ಮಾತುಕತೆಗೂ ಮುಂಚಿತವಾಗಿಯೂ ಮಲ್ಲಿಕಾರ್ಜುನ ಖರ್ಗೆ ಅವರು ರಾಹುಲ್ ಗಾಂಧಿ ಅವರಿಂದ ಸಲಹೆ ಪಡೆದಿದ್ದರು.

ಇಂದು ಮಧ್ಯಾಹ್ನದ ವೇಳೆಗೆ ಮತ್ತೊಮ್ಮೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಸಭೆ ನಡೆಸುವ ನಿರೀಕ್ಷೆಯಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಜೊತೆಯಲ್ಲೇ ಕರೆದು ಸಭೆ ನಡೆಸಿ, ಮುಖ್ಯಮಂತ್ರಿ ಆಯ್ಕೆಯನ್ನು ಮುಗಿಸುವ ಸಾಧ್ಯತೆ ಇದೆ.

ಸಿದ್ದರಾಮಯ್ಯ ತಮಗೆ ಪೂರ್ತಿ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಡಿ.ಕೆ.ಶಿವಕುಮಾರ್ ಕೂಡ ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದು, 135 ಸೀಟು ಗೆಲ್ಲುವಲ್ಲಿ ಯಶಸ್ವಿಯಾಗಿದ್ದು ತಮಗೇ ಸಿಎಂ ಸ್ಥಾನ ಸಿಗಬೇಕು ಎಂದು ಹಠ ಹಿಡಿದಿದ್ದಾರೆ. ಕಾಂಗ್ರೆಸ್‌ನಲ್ಲಿ ಕಗ್ಗಂಟಾಗಿರುವ ಮುಖ್ಯಮಂತ್ರಿ ಆಯ್ಕೆಯನ್ನು ಹೈಕಮಾಂಡ್ ಹೇಗೆ ಬಗೆಹರಿಸುತ್ತದೆ ಎಂದು ಕಾದು ನೋಡಬೇಕಿದೆ.

suddiyaana