ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ! – ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾಯಕತ್ವ ಬದಲಾವಣೆಯ ಗೊಂದಲ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಈ ಮೂಲಕ ಕಳೆದ ಒಂದು ವರ್ಷದಿಂದ ಕೇಳಿಬರುತ್ತಿದ್ದ ಸಿಎಂ ಬದಲಾವಣೆ ವದಂತಿಗೆ ಹೈಕಮಾಂಡ್ ತೆರೆ ಎಳೆದಂತಾಗಿದೆ.
ಇದನ್ನೂ ಓದಿ: RCB ವಿರುದ್ಧ PBKS ಟ್ರೋಲ್ – LSG ತೊರೆದ ಅರ್ಜುನ್ ತೆಂಡೂಲ್ಕರ್ – ಅರ್ಶ್‌ದೀಪ್‌ಗೆ ಮೋಸ ಮಾಡಿದ್ರಾ ವೈಭವ್?
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ, ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು ಪಕ್ಷಕ್ಕಾಗಿ ದಶಕಗಳಿಂದ ಪ್ರಾಮಾಣಿಕವಾಗಿ ದುಡಿದಿದ್ದೇವೆ. ನಮ್ಮ ಹಣೆಬರಹಕ್ಕಿಂತಲೂ ಪಕ್ಷದ ಸಿದ್ಧಾಂತ ನಮಗೆ ಮುಖ್ಯ. ನಾಯಕತ್ವದ ಬದಲಾವಣೆಯ ಬಗ್ಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ ಬದಲಾವಣೆಯ ಸಮಯ ಬಂದಾಗ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ. ಅಲ್ಲಿಯವರೆಗೆ ಇಂತಹ ಚರ್ಚೆಗಳಿಗೆ ಆಸ್ಪದವಿಲ್ಲ ಎಂದು ಹೇಳಿದರು. ಅಲ್ಲದೆ, ರಾಜ್ಯ ಕಾಂಗ್ರೆಸ್‌ನಲ್ಲಿರುವ ಸಣ್ಣಪುಟ್ಟ ಗೊಂದಲಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಗಳ ಬಗ್ಗೆ ಮಾತನಾಡಿದ ಅವರು, ಸಮೀಕ್ಷೆಗಳು ಏನೇ ಹೇಳಿದರೂ ತಮಿಳುನಾಡು ಮತ್ತು ಕೇರಳದಲ್ಲಿ ನಮ್ಮ ಮೈತ್ರಿಕೂಟ ಅಧಿಕಾರ ಹಿಡಿಯುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ಅಸ್ಸಾಂನಲ್ಲಿ ಎಕ್ಸಿಟ್ ಪೋಲ್ ಭವಿಷ್ಯಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ದಬ್ಬಾಳಿಕೆ ನಡೆಸಿದ್ದರೂ ಟಿಎಂಸಿ ಮುನ್ನಡೆ ಸಾಧಿಸಲಿದೆ. ಫಲಿತಾಂಶದ ಬಳಿಕ ಮಮತಾ ಬ್ಯಾನರ್ಜಿ ಅವರಿಗೆ ಬೆಂಬಲ ನೀಡುವ ಕುರಿತು ಹೈಕಮಾಂಡ್ ತೀರ್ಮಾನಿಸಲಿದೆ ಎಂದರು.

ನೋಡಿರಿ

