ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬೆತ್ತಲೆ ಮೆರವಣಿಗೆ ಪ್ರಕರಣದ ತನಿಖೆ ಸಿಬಿಐಗೆ ವಹಿಸಿದ ಕೇಂದ್ರ
ದೇಶಾದ್ಯಂತ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿರುವ ಮಣಿಪುರದಲ್ಲಿ ಕುಕಿ ಸಮುದಾಯದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆಯನ್ನು ಕೇಂದ್ರ ಸರಕಾರ ಸಿಬಿಐಗೆ ವಹಿಸಿದೆ.
ಮಹಿಳೆಯರ ಬೆತ್ತಲೆ ಮೆರವಣಿಗೆ ನಡೆಸಿ, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣವನ್ನು ಮಣಿಪುರದಿಂದ ಹೊರಗೆ ಈ ಪ್ರಕರಣದ ವಿಚಾರಣೆ ನಡೆಸಲು ಸರ್ಕಾರ ನಿರ್ಧರಿಸಿದೆ. ನೆರೆಯ ಅಸ್ಸಾಂನ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಸ್ಟಾರ್ ಚಿಹ್ನೆ ಹೊಂದಿರುವ ನೋಟುಗಳ ಬಗ್ಗೆ ಗೊಂದಲ ಬೇಡ, ಇವು ಕಾನೂನುಬದ್ಧ ನೋಟುಗಳು – ಆರ್‌ಬಿಐ ಸ್ಪಷ್ಟನೆ
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಮತ್ತು ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಸಿಬಿಐಗೆ ವಹಿಸಿದೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯವು ಮೈಟಿ ಮತ್ತು ಕುಕಿ ಎರಡೂ ಗುಂಪುಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಮಣಿಪುರದಲ್ಲಿ ಸಹಜ ಸ್ಥಿತಿ ಪುನಃಸ್ಥಾಪಿಸಲು ಮಾತುಕತೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಮಣಿಪುರ ಹಿಂಚಾಚಾರ ನಿಯಂತ್ರಿಸುವಲ್ಲಿ ವಿಫಲವಾದ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಸ್ವಪಕ್ಷದ ನಾಯಕರೇ ಕಿಡಿಕಾರಿದ್ದಾರೆ. ಮೂರು ತಿಂಗಳಿಂದ ನಡೆಯುತ್ತಿರುವ ಘರ್ಷಣೆ ಹಾಗೂ ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯದ ಬಿಜೆಪಿ ಸರಕಾರಗಳ ವೈಫಲ್ಯ ಖಂಡಿಸಿ ಬಿಹಾರ ಬಿಜೆಪಿ ನಾಯಕ ವಿನೋದ್ ಶರ್ಮಾ ಅವರು, ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ವಿನೋದ್ ಶರ್ಮಾ, ‘‘ನಡು ರಸ್ತೆಯಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಘಟನೆಯಿಂದ ಜಗತ್ತಿನ ಮುಂದೆ ಭಾರತ ತಲೆತಗ್ಗಿಸುವಂತಾಗಿದೆ.ಇದಕ್ಕೆ ಮಣಿಪುರ ಸಿಎಂ ಹಾಗೂ ಕೇಂದ್ರ ಸರಕಾರ ನೇರ ಕಾರಣ,’’ ಎಂದು ಆರೋಪಿಸಿದ್ದಾರೆ.