ಯಮುನಾ ನದಿಯಲ್ಲಿ ಭೀಕರ ದುರಂತ- ಪ್ರವಾಸಿಗರ ದೋಣಿ ಮುಳುಗಿ 10 ಮಂದಿ ಸಾ*ವು

ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ವೃಂದಾವನದ ಶೃಂಗಾರ್ ಘಾಟ್ ಬಳಿ ಯಮುನಾ ನದಿಯಲ್ಲಿ ದೊಡ್ಡ ದುರಂತ ಸಂಭವಿಸಿದೆ. ಯಮುನಾ ನದಿಯಲ್ಲಿ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಪಲ್ಟಿಯಾಗಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. 22 ಮಂದಿ ಗಾಯಗೊಂಡಿದ್ದು, 5ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಬೌಲರ್ ಅಲ್ಲ ನನ್ನ ಗುರಿ ಬಾಲ್ ಅಷ್ಟೇ – Baby Boss ಬ್ಯಾಟಿಂಗ್ ಸೀಕ್ರೆಟ್ ಇದೇ..!
ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಆಳವಾದ ನೀರಿಗೆ ಹೋಗಿ ತೇಲುವ ಪಾಂಟೂನ್ಗೆ ಡಿಕ್ಕಿ ಹೊಡೆದಿದೆ. ನೀರಿನ ಮಟ್ಟ ಏರಿಕೆಯಿಂದಾಗಿ ಇತ್ತೀಚೆಗೆ ಈ ಪ್ರದೇಶದಲ್ಲಿ ಒಂದು ಪಾಂಟೂನ್ ಸೇತುವೆಯನ್ನು ತೆರವುಗೊಳಿಸಲಾಗಿತ್ತು. ಕೆಲವು ಪಾಂಟೂನ್ ಡ್ರಮ್ಗಳು ನದಿಯಲ್ಲಿ ಉಳಿದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವುಗಳಲ್ಲಿ ಒಂದು ಈ ಬೋಟ್ಗೆ ಡಿಕ್ಕಿ ಹೊಡೆದಿದೆ ಎಂದು ಶಂಕಿಸಲಾಗಿದೆ. ಇದ್ರ ಪರಿಣಾಮ ಈ ದುರಂತ ಸಂಭವಿಸಿದೆ.
ಮೃತರಲ್ಲಿ ಹೆಚ್ಚಿನವರು ಲುಧಿಯಾನದ ಜಗ್ರಾಂವ್ ಮತ್ತು ದುಗ್ರಿ ಪ್ರದೇಶದವರು ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ. ಕವಿತಾ ರಾಣಿ (49), ಚರಂಜಿತ್ (40), ಸಪ್ನಾ ಹನ್ಸ್ (55), ರಿಕೇಶ್ ಗುಲಾಟಿ, ಮಧುರ್ ಬೆಹ್ಲ್, ಆಶಾ ರಾಣಿ, ಪಿಂಕಿ ಬೆಹ್ಲ್, ಅಂಜು ಗುಲಾಟಿ, ಇಶಾನ್ ಕಟಾರಿಯಾ, ಮಿನು ಬನ್ಸಾಲ್ ಮೃತಪಟ್ಟಿದ್ದಾರೆ. ಮಾಣಿಕ್ ಟಂಡನ್, ಪಂಕಜ್ ಮಲ್ಹೋತ್ರಾ, ರಿಷಬ್ ಶರ್ಮಾ, ಯಶ್ ಭಲ್ಲಾ ಮತ್ತು ಮೋನಿಕಾ ನಾಪತ್ತೆಯಾಗಿದ್ದಾರೆ.
22 ಮಂದಿ ಗಾಯಗೊಂಡಿದ್ದಾರೆ. ಪಿಂಕಿ, ಮಂಜು, ಸವಿತಾ, ತನೀಶ್ ಜೈನ್, ರೇಖಾ, ರಾಜಿಂದರ್ ಕೌರ್, ಸರೋಜ್ ಮತ್ತು ಡಾಲಿ ಚಿಕಿತ್ಸೆ ಪಡೆಯುತ್ತಿದ್ದು, ಇತರರ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ಅಗ್ನಿಶಾಮಕ ಸೇವೆಗಳು, ನಾಗರಿಕ ರಕ್ಷಣಾ ತಂಡಗಳು, ಸೇನೆ ಮತ್ತು ಸ್ಥಳೀಯ ಡೈವರ್ಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿವೆ.
ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಮಾತನಾಡಿ, ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಿಗಾಗಿ ಭಗವಂತ್ ಮಾನ್, ಉತ್ತರ ಪ್ರದೇಶ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

ನೋಡಿರಿ

