ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ರಾಜ್ಯ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ – ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ವ್ಯಂಗ್ಯ

ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ರಾಜ್ಯ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ – ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಚಂದ್ರಯಾನ -3 ಗೆ ಸಕ್ಸಸ್ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ನಾಯಕರು ಸಾರ್ವಜನಿಕ ಸ್ಥಳದಲ್ಲಿ ನಿಂತು ಪ್ರಧಾನಿ ಮೋದಿ ಅವರಿಗೆ ಕೈ ಬೀಸಿ ಸ್ವಾಗತಿಸಿದ್ದಾರೆ. ಈ ಸಂಬಂಧ ರಾಜ್ಯ ಕಾಂಗ್ರೆಸ್‌ ವ್ಯಂಗ್ಯವಾಡಿದೆ. ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು, ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ? ಎಂದು ಲೇವಡಿ ಮಾಡಿದೆ.

ಇದನ್ನೂ ಓದಿ: ಆಗಸ್ಟ್​ 23 ʼರಾಷ್ಟ್ರೀಯ ಬಾಹ್ಯಾಕಾಶ ದಿನʼ, ಚಂದ್ರನ ಮೇಲೆ ಲ್ಯಾಂಡರ್ ಇಳಿದ ಸ್ಥಳ ‘ಶಿವಶಕ್ತಿ’ – ಪ್ರಧಾನಿ ಮೋದಿ ಘೋಷಣೆ

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ. ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ರಾಜ್ಯ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ವ್ಯಂಗ್ಯವಾಡಿದೆ.

ಇನ್ನು ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್‌ ಮಾಡಿ ವ್ಯಂಗ್ಯವಾಡಿದ್ದಾರೆ.  ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದಿದ್ದಾರೆ.

ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ “ವಿರೋಧ ಪಕ್ಷದ ನಾಯಕ”ನ ಆಯ್ಕೆ ಸಾಧ್ಯವಾಗುವುದೇ? “ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ” ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಅವರು ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ.

suddiyaana