ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಲಾಲ್- ಮೊದಲ ರಾಷ್ಟ್ರೀಯ ಪ್ರಶಸ್ತಿ ಸ್ವೀಕರಿಸಿದ ಶಾರುಖ್ ಖಾನ್

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನವದೆಹಲಿಯಲ್ಲಿ ನಡೆದಿದೆ. ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದರು. ಇದೇ ಮೊಟ್ಟ ಮೊದಲ ಬಾರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದು ವಿಶೇಷ.
ಇದನ್ನೂ ಓದಿ: ಮಲಯಾಳಂ ಸ್ಟಾರ್ ನಟರ ವಿರುದ್ಧ ಸ್ಮಗ್ಲಿಂಗ್ ಶಂಕೆ- ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ
ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮೋಹನ್ ಲಾಲ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದರು. ಮೋಹನ್ ಲಾಲ್ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ಬಂದಾಗ ಸಭಾಂಗಣದಲ್ಲಿ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದನೆ ಸಲ್ಲಿಸಿದರು.
ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ತಮ್ಮ ಮೊದಲ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸಿದರು. ಶಾರುಖ್ ಖಾನ್ ಅವರು, ಜವಾನ್ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು. ಇದು ಅವರ 33 ವರ್ಷಗಳ ಚಲನಚಿತ್ರ ವೃತ್ತಿಜೀವನದ ಮೊದಲ ರಾಷ್ಟ್ರೀಯ ಪ್ರಶಸ್ತಿಯಾಗಿದೆ. 12th ಫೇಲ್ ಚಿತ್ರಕ್ಕೆ ವಿಕ್ರಾಂತ್ ಮಾಸ್ಸಿ ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದರು. ಶ್ರೀಮತಿ ಚಟರ್ಜಿ vs ನಾರ್ವೆ ಚಿತ್ರದಲ್ಲಿನ ಅಭಿನಯಕ್ಕಾಗಿ ನಟಿ ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು.
ಫಾಲ್ಕೆ ಪ್ರಶಸ್ತಿ ಗೌರವಕ್ಕೆ ಭಾಜನರಾದ ಮಲಯಾಳಂ ಚಿತ್ರರಂಗದ ಎರಡನೇ ಕಲಾವಿದರು ಮೋಹನ್ಲಾಲ್ ಆಗಿದ್ದಾರೆ. ಈ ಹಿಂದೆ 2004ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಮಲಯಾಳಂ ಚಿತ್ರರಂಗದ ಜನಪ್ರಿಯ ನಿರ್ದೇಶಕ ಅಡೂರು ಗೋಪಾಲಕೃಷ್ಣನ್ ಅವರಿಗೆ ನೀಡಲಾಗಿತ್ತು. ಈಗ ಮೋಹನ್ಲಾಲ್ ಅವರಿಗೆ 2023 ರ ಸಾಲಿನ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಲಾಗಿದೆ. ಮೋಹನ್ ಲಾಲ್ ಅವರು ಸಿನಿಮಾ ರಂಗಕ್ಕೆ ಸಲ್ಲಿಸಿರುವ ಅಭೂತಪೂರ್ವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ನೋಡಿರಿ

