ನಾಗಮಂಗಲ ಗಲಭೆ ಕೇಸ್‌ – ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಹೆಚ್‌ಡಿಕೆ

ನಾಗಮಂಗಲ ಗಲಭೆ ಕೇಸ್‌ – ಅಂಗಡಿ ಮುಗ್ಗಟ್ಟುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ ಹೆಚ್‌ಡಿಕೆ

ಕೋಮು ಗಲಭೆಯಿಂದಾಗಿ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕರನ್ನು ಬಂಧಿಸಲಾಗಿದೆ. ಇದೀಗ ಘಟನಾ ಸ್ಥಳಕ್ಕೆ ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶುಕ್ರವಾರ ಮುಂಜಾನೆ ನಾಗಮಂಗಲಕ್ಕೆ ಹೆಚ್‌ಡಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಗಲಭೆಯಿಂದ ಹಾನಿಗೊಳಗಾದ ಅಂಗಡಿಗಳನ್ನು ಪರಿಶೀಲನೆ ನಡೆಸಿದ್ದಾರೆ.  ಈ ವೇಳೆ ಹೆಚ್‌ಡಿಕೆ ಬಳಿ ಅಂಗಡಿ ಮಾಲೀಕರ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ವಾರವಿಡೀ ತಾಂಡವ್‌ ಮದುವೆ ಬೇಕಿತ್ತಾ? – ಬೋರ್‌ ಹೊಡೆಸಿತಾ ಭಾಗ್ಯಲಕ್ಷ್ಮೀ?

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್‌ಡಿಕೆ, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದರು.

ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ.   ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ನಾಗಮಂಗಲದಲ್ಲಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಹೇಳಿದರು.

ಸಾರ್ವಜನಿಕರು ಶಾಂತಿ ಕಾಪಾಡಬೇಕು ಎನ್ನುವುದು ನನ್ನ ಕಳಕಳಿಯ ಮನವಿ. ತಕ್ಷಣವೇ ಪಟ್ಟಣದಲ್ಲಿ ಶಾಂತಿ ಮರುಸ್ಥಾಪನೆ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಪ್ರಕರಣ ನೆಪದಲ್ಲಿ ವಿರೋಧ ಪಕ್ಷಗಳ ಮುಖಂಡರು, ಕಾರ್ಯಕರ್ತರ ಮೇಲೆ ಪೊಲೀಸರು ದರ್ಪ ತೋರಿದರೆ ಸಹಿಸುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ.

Shwetha M

Leave a Reply

Your email address will not be published. Required fields are marked *