ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮತ್ತೆ ನಳೀನ್ ಕುಮಾರ್ ಕಟೀಲ್ ಸ್ವರ್ಧೆ ಎಂದ ವಿಜಯೇಂದ್ರ! – ಸ್ವಪಕ್ಷದಲ್ಲೇ ನಾಯಕರ ಅಸಮಾಧಾನ
ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದೆ. ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲಲು ಈಗಿನಿಂದಲೇ ಪ್ಲಾನ್ ಮಾಡಿಕೊಳ್ಳುತ್ತಿವೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ನಳೀನ್ ಕುಮಾರ್ ಕಟೀಲ್ ಅಭ್ಯರ್ಥಿ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದಾರೆ. ಈ ವೇಳೆ ಮತ್ತೆ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸಿಕೊಡಿ ಎಂದು ಹೇಳಿದ್ದಾರೆ. ಅವರ ಈ ಹೇಳಿಕೆಯಿಂದಾಗಿ ಸ್ವಪಕ್ಷದಲ್ಲೇ ಬಿರುಗಾಳಿ ಏಳುವಂತೆ ಮಾಡಿದೆ.
ಇದನ್ನೂ ಓದಿ:ಕಲೆಕ್ಷನ್ ಕೊಡಿ.. ನಿಗಮ ಮಂಡಳಿ ಅಧಿಕಾರ ಪಡಿ! – ಕಾಂಗ್ರೆಸ್ ವಿರುದ್ಧ ರೇಟ್ ಕಾರ್ಡ್ ಬಿಡುಗಡೆ ಮಾಡಿದ ಬಿಜೆಪಿ!
ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿರುವ ಅವರು, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ, ವಿಜಯೇಂದ್ರ, ಮುಂದಿನ ಲೋಕಸಭಾ ಚುನಾವಣೆಯನ್ನ ನಾವು ಗಂಭೀರವಾಗಿ ತೆಗೆದುಕೊಳ್ಳಬೇಕಿದೆ. ಮತ್ತೊಮ್ಮೆ ನಮ್ಮ ಪಕ್ಷದ ಅಭ್ಯರ್ಥಿಯಾದ ನಳಿನ್ ಕುಮಾರ್ ಕಟೀಲ್ ಅವರನ್ನು ಗೆಲ್ಲಿಸುವ ಕೆಲಸ ಮಾಡಬೇಕಿದೆ ಎಂದು ಹೇಳಿದ್ದಾರೆ.
ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿತನದ ಬಗ್ಗೆ ಸ್ವಪಕ್ಷೀಯರಲ್ಲೇ ತೀವ್ರ ವಿರೋಧ ಇದೆ. ನಳೀನ್ ಕುಮಾರ್ ಕಟೀಲ್ ಅವರು ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿಲ್ಲ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಬಾರದು ಎಂಬ ಕೂಗು ಕೇಳಿಬರುತ್ತಿದೆ. ಈ ಮಧ್ಯೆಯೇ ವಿಜಯೇಂದ್ರ ಈ ರೀತಿ ಹೇಳಿಕೆ ನೀಡಿರುವುದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಇನ್ನು ಅರುಣ್ ಕುಮಾರ್ ಪುತ್ತಿಲ ಅವರ ಬಂಡಾಯದಿಂದ ಸದ್ಯ ದಕ್ಷಿಣ ಕನ್ನಡ ಜಿಲ್ಲೆ ಭಾರೀ ಸುದ್ದಿಯಲ್ಲಿದೆ. ಇವರು ಮಾತ್ರವಲ್ಲದೆ, ಹಲವು ಮಂದಿ ಸಂಸದ ಸ್ಥಾನದ ಟಿಕೆಟ್ ಆಕಾಂಕ್ಷಿಗಳು ಪಕ್ಷದಲ್ಲಿದ್ದಾರೆ. ಪರಿಸ್ಥಿತಿ ಹೀಗಿರುವಾಗಲೇ, ಮತ್ತೆ ನಳಿನ್ ಗೆಲ್ಲಿಸಿ ಎಂದ ವಿಜಯೇಂದ್ರ ಕರೆಕೊಟ್ಟಿರುವುದು ಚರ್ಚೆಗೆ ಗ್ರಾಸವಾಗಿದೆ.