ಬಿ. ಫಾರಂ ಪಡೆದು ತಾತನ ಆಶೀರ್ವಾದ ಪಡೆಯುವಾಗ ಭಾವುಕ – ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ರಾಮನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ನಿಖಿಲ್ ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮಾಜಿ ಪ್ರಧಾನಿ ದೇವೇಗೌಡರ ಭೇಟಿಗೆ ಬಂದಿದ್ದರು. ದೇವೇಗೌಡರ ಬಳಿ ಬಿ. ಫಾರಂ ಪಡೆದು ಆಶೀರ್ವಾದ ಪಡೆದುಕೊಳ್ಳಲು ಬಂದಾಗ ನಿಖಿಲ್ ಕುಮಾರಸ್ವಾಮಿ ಭಾವುಕರಾದರು.
ಇದನ್ನೂ ಓದಿ: ರಾಜ್ಯ ವಿಧಾನಸಭಾ ಚುನಾವಣೆ: ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ
ಹೆಚ್.ಡಿ ದೇವೇಗೌಡರು ಬಿ. ಫಾರಂ ನೀಡುತ್ತಿದ್ದಂತೆ ನಿಖಿಲ್ ಭಾವುಕರಾಗಿ ಕಣ್ಣೀರು ಹಾಕಿದರು. ಇದೇ ವೇಳೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಚೆನ್ನಮ್ಮರ ಆಶೀರ್ವಾದವನ್ನು ನಿಖಿಲ್ ಕುಮಾರಸ್ವಾಮಿ ಪಡೆದರು. ನಿಖಿಲ್ ಕುಮಾರಸ್ವಾಮಿ ಬಿ ಫಾರಂ ಪಡೆಯುವ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಶಾಸಕಿ ಅನಿತಾ ಕುಮಾರಸ್ವಾಮಿ, ಹಾಗೂ ಪತ್ನಿ ರೇವತಿ ಜೊತೆಯಲ್ಲಿದ್ದರು.
ಬೆಳಗ್ಗೆ 10 ಗಂಟೆಗೆ ರಾಮನಗರದ ಚಾಮುಂಡೇಶ್ವರಿ ದೇವಾಲಯಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಚರ್ಚ್ ಹಾಗೂ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬೃಹತ್ ಮೆರವಣಿಗೆ ಮೂಲಕ ತೆರಳಿದ ನಿಖಿಲ್ ಕುಮಾರಸ್ವಾಮಿ ಮಧ್ಯಾಹ್ನ 12:30ಕ್ಕೆ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅನಿತಾ ಕುಮಾರಸ್ವಾಮಿ ಜೊತೆಯಲ್ಲಿದ್ದರು.
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿಯಾಗಿರುವ ಅನಿತಾ ಕುಮಾರಸ್ವಾಮಿ ಚುನಾವಣೆ ಕಣದಿಂದ ಹಿಂದೆ ಸರಿದಿದ್ದಾರೆ. ಈ ಬಾರಿ ನಿಖಿಲ್ ಕುಮಾರಸ್ವಾಮಿ ರಾಮನಗರದಿಂದ ಸ್ಪರ್ಧೆ ಮಾಡುತ್ತಿದ್ದಾರೆ.