ಕೇರಳದಲ್ಲಿ ನಾಲ್ವರಿಗೆ ನಿಫಾ ಸೋಂಕು ದೃಢ – ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ
ತಿರುವನಂತಪುರಂ: ಕೇರಳದ ಕೋಝಿಕ್ಕೋಡ್‌ನಲ್ಲಿ ನಾಲ್ವರಿಗೆ ನಿಫಾ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಜ್ವರ ಹಾಗೂ ಉಸಿರಾಟದ ತೊಂದರೆಯಿಂದ ಇಬ್ಬರು ಸಾವನ್ನಪ್ಪಿದ್ದರು. ನಿಫಾ ವೈರಸ್ ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮೃತರ ಸ್ಯಾಂಪಲ್ ಅನ್ನು ಟೆಸ್ಟ್‌ಗೆ ಪುಣೆಗೆ ಕಳುಹಿಸಲಾಗಿತ್ತು. ಸದ್ಯ ಅದರ ರಿಪೋರ್ಟ್ ಬಂದಿದ್ದು, ನಿಫಾ ವೈರಸ್‌ನಿಂದಲೇ ಮೃತಪಟ್ಟಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಡೆಂಘೀ ಪ್ರಕರಣ – ಪ್ಲೇಟ್ ಲೆಟ್ಸ್ ಗಳಿಗಾಗಿ ಹೆಚ್ಚಿದ ಬೇಡಿಕೆ
ಕೋಝಿಕ್ಕೋಡ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರಿಗೂ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿತ್ತು. ಮೃತಪಟ್ಟವರಲ್ಲಿ ಒಬ್ಬರ ಕುಟುಂಬದ ನಾಲ್ವರಿಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಲ್ಲಿ 9 ವರ್ಷದ ಮಗುವಿನ ಸ್ಥಿತಿ ಚಿಂತಾಜನಕವಾಗಿದೆ. 10 ತಿಂಗಳ ಮಗುವಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ 75 ಜನರ ಸಂಪರ್ಕ ಪಟ್ಟಿ ಸಿದ್ಧಪಡಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಈಗಾಗಲೇ ಕ್ವಾರಂಟೈನ್‌ಗೆ ಸಿದ್ಧತೆಗಳನ್ನು ನಡೆಸಿದ್ದು, ಕೋಝಿಕ್ಕೋಡ್ ಜಿಲ್ಲೆಯ ಆಸ್ಪತ್ರೆಗಳಲ್ಲಿ ಮಾಸ್ಕ್, ಪಿಪಿಇ ಬಳಸಲು ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಅಲ್ಲದೇ ಅನಿವಾರ್ಯತೆ ಇದ್ದರೆ ಮಾತ್ರ ಆಸ್ಪತ್ರೆಗೆ ಬನ್ನಿ. ಅನಗತ್ಯವಾಗಿ ಆಸ್ಪತ್ರೆಗೆ ಭೇಟಿ ನೀಡುವುದು ಬೇಡ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮನವಿ ಮಾಡಿದ್ದಾರೆ.