ಮಳೆಯಿಲ್ಲದೆ ಈರುಳ್ಳಿ ಬೆಳೆ ನಾಶ – ಮನನೊಂದು ರೈತ ಆತ್ಮಹತ್ಯೆ
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯ ಅಭಾವದಿಂದಾಗಿ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ನೀರಿಲ್ಲದೆ ಬೆಳೆದ ಬೆಳೆ ಸಂಪೂರ್ಣ ನಾಶವಾಗುತ್ತಿದೆ. ಮಳೆಯಿಲ್ಲದೆ ಈರುಳ್ಳಿ ಬೆಳೆ ಹಾನಿಯಿಂದ ಮನನೊಂದ ರೈತರೊಬ್ಬರು ತಮ್ಮ ಹೊಲದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ರೈತನನ್ನು ಕಡೂರು ತಾಲೂಕಿನ ಗಿರಿಯಾಪುರ ನಿವಾಸಿ ಸತೀಶ್ (49) ಎಂದು ಗುರುತಿಸಲಾಗಿದೆ. ಸತೀಶ್ ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆಯಲು ಸಾಲ ಮಾಡಿಕೊಂಡಿದ್ದರು. ಆದರೆ, ಮುಂಗಾರು ವೈಫಲ್ಯ ಮತ್ತು ಬರಗಾಲದಂತಹ ಪರಿಸ್ಥಿತಿಯಿಂದಾಗಿ ಬೆಳೆ ಸಂಪೂರ್ಣ ಒಣಗಿ ಹೋಗಿದೆ. ಇದರಿಂದ ಮನನೊಂದ ಸತೀಶ್ ತನ್ನ ಜಮೀನಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ಚಿಕ್ಕಬಳ್ಳಾಪುರದಲ್ಲಿ ಮಳೆಯಿಲ್ಲದೇ ಕಂಗಾಲಾದ ಜನ – ಮಳೆಗಾಗಿ ಮಾಡಿಸಿದರು ಮಕ್ಕಳ ಮದುವೆ
ರಾಜ್ಯದಲ್ಲಿ ಬರ ಪರಿಸ್ಥಿತಿಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯು ಶೀಘ್ರವೇ ವರದಿ ಸಲ್ಲಿಸಲಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದ ಬಳಿಕವೇ ಕೇಂದ್ರದ ನೆರವು ಕೋರಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ತಿಳಿಸಿದ್ದಾರೆ. ಬರ ಘೋಷಣೆಯಾದ ನಂತರ ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ಕೋರಲಾಗುವುದು ಮತ್ತು ನಂತರ ಕೇಂದ್ರದ ತಂಡವು ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದೆ.