ಚೀನಾದಲ್ಲಿ ನ್ಯುಮೋನಿಯ ಪ್ರಕರಣ ಹೆಚ್ಚಳ – ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಚೀನಾದಲ್ಲಿ ನ್ಯುಮೋನಿಯ ಸೋಂಕು ಮಕ್ಕಳಲ್ಲಿ ಕಂಡುಬರುತ್ತಿದೆ. ಸಾವಿರಾರು ಮಕ್ಕಳು ಈ ಸಮಸ್ಯೆಯಿಂದ ಬಳಲುತ್ತಿದ್ದು, ನಿತ್ಯ 7000ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂದು ವರದಿಯಾಗಿದೆ. ಚೀನಾದಲ್ಲಿ ವೇಗವಾಗಿ ಈ ಸೋಂಕು ಹರಡುತ್ತಿರುವ ಹಿನ್ನೆಲೆ ಇತರ ರಾಷ್ಟ್ರಗಳಿಗೂ ತಲೆನೋವು ಶುರುವಾಗಿದೆ. ಚೀನಾದಲ್ಲಿ ನ್ಯುಮೋನಿಯಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಕೇಂದ್ರ ಆರೋಗ್ಯ ಇಲಾಖೆ ಕರ್ನಾಟಕ ಸೇರಿ ಒಟ್ಟು ಆರು ರಾಜ್ಯಗಳು ಅಲರ್ಟ್ ಆಗಿರುವಂತೆ ಆದೇಶವನ್ನು ನೀಡಿದೆ. ಈ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಮಕ್ಕಳಿಂದ ತುಂಬಿದ ಬೀಜಿಂಗ್‌ನ ಆಸ್ಪತ್ರೆಗಳು! – ನಿತ್ಯ 7 ಸಾವಿರಕ್ಕೂ ಅಧಿಕ ಮಕ್ಕಳು ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲು
ಚೀನಾದಲ್ಲಿ ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ. ರಂದೀಪ್ ಅವರು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಿಬ್ಬಂದಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ.
ಇದು ಸಾಮಾನ್ಯ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಕಡಿಮೆ ತೀವ್ರತೆ ಹೊಂದಿದ. ಇದು ಸಾಮಾನ್ಯವಾಗಿ ಐದರಿಂದ ಏಳು ದಿನಗಳವರೆಗೆ ಇರುತ್ತದೆ. ಆದಾಗ್ಯೂ, ಇದು ಮಕ್ಕಳಿಗೆ, ವೃದ್ಧರಿಗೆ, ಗರ್ಭಿಣಿಯರಿಗೆ, ಇಮ್ಯುನೊಕೊಂಪ್ರೊಮೈಸ್ಡ್ ಮತ್ತು ದೀರ್ಘಕಾಲೀನ ಔಷಧಿಗಳಾದ ಸ್ಟೆರಾಯ್ಡ್‌ಗಳನ್ನು ತೆಗೆದುಕೊಳ್ಳುವವರಿಗೆ ಹೆಚ್ಚಿನ ಅಪಾಯವನ್ನುಂಟುಮಾಡುತ್ತದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಜ್ವರ, ಶೀತ, ಅಸ್ವಸ್ಥತೆ, ಹಸಿವಿನ ಕೊರತೆ, ವಾಕರಿಕೆ, ಸೀನುವಿಕೆ ಮತ್ತು ಒಣ ಕೆಮ್ಮು ಈ ರೋಗದ ಲಕ್ಷಣಗಳಾಗಿವೆ. ಹೀಗಾಗಿ ಕೆಮ್ಮುವಾಗ ಅಥವಾ ಸೀನುವಾಗ ನಿಮ್ಮ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಬೇಕು.
ಸಾಬೂನು ಮತ್ತು ನೀರಿನಿಂದ ನಿಮ್ಮ ಕೈಗಳನ್ನು ಆಗಾಗ್ಗೆ ತೊಳೆದುಕೊಳ್ಳಬೇಕು. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸುವುದನ್ನು ತಪ್ಪಿಸಬೇಕು. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದನ್ನು ತಪ್ಪಿಸಿ ಮತ್ತು ಅಂತಹ ಸ್ಥಳಗಳಿಗೆ ಭೇಟಿ ನೀಡಿದರೆ ಫೇಸ್ ಮಾಸ್ಕ್ ಬಳಸುವುದು ಉತ್ತಮ. ಫ್ಲೂ ಪೀಡಿತ ವ್ಯಕ್ತಿಗಳಿಂದ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಉಲ್ಲೇಖವಾಗಿದೆ.