ಅಂಗನವಾಡಿ ಕಾರ್ಯಕರ್ತೆಯರನ್ನ ಎಳೆದೊಯ್ದ ಪೊಲೀಸರು – ಹೋರಾಟದಲ್ಲಿ ಭಾಗಿಯಾಗಿದ್ದ ಮಹಿಳೆ ಸಾವು..!

ಅಂಗನವಾಡಿ ಕಾರ್ಯಕರ್ತೆಯರನ್ನ ಎಳೆದೊಯ್ದ ಪೊಲೀಸರು – ಹೋರಾಟದಲ್ಲಿ ಭಾಗಿಯಾಗಿದ್ದ ಮಹಿಳೆ ಸಾವು..!

ಶಿಕ್ಷಕರ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ ಹೋರಾಟದಲ್ಲಿ ಭಾಗಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಕಾರಿನ ಬಾನೆಟ್​​ ಮೇಲೆ ವ್ಯಕ್ತಿಯನ್ನ ಎಳೆದೊಯ್ದ ಚಾಲಕಿ – ಕಾರಣ ಕೇಳಿದ್ರೆ ನೀವೇ ಶಾಕ್! 

ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಇವತ್ತು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅಂಗನವಾಡಿ ಕಾರ್ಯಕರ್ತೆಯರಿಗೆ ಶಿಕ್ಷಕರ ಸ್ಥಾನಮಾನ ನೀಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸುತ್ತಿದ್ದಾರೆ. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮೂರನೇ ದಿನವಾದ ಇವತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಭಟನಾ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದಿದ್ದರು. ನಮ್ಮ ಬೇಡಿಕೆಗಳನ್ನ ಆಲಿಸಿ ಅವುಗಳನ್ನ ಈಡೇರಿಸಲು ಲಿಖಿತ ಭರವಸೆ ನೀಡಬೇಕು. ಅಲ್ಲಿಯವರೆಗೂ ಧರಣಿ ನಿಲ್ಲಿಸಲ್ಲ ಅಂತಾ ಪಟ್ಟು ಹಿಡಿದಿದ್ದರು.

ಪ್ರತಿಭಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪಾಲ್ಗೊಂಡಿದ್ದರು. ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಫ್ರೀಡಂ ಪಾರ್ಕ್ ಗೇಟ್ ಮುಂಭಾಗದಲ್ಲೇ ಎಲ್ಲರನ್ನೂ ಪೊಲೀಸರು ತಡೆದ್ರು. 10 ಬಿಎಂಟಿಸಿ ಬಸ್​ಗಳ ಮೂಲಕ ವಶಕ್ಕೆ ಪಡೆದುಕೊಂಡರು. ಇದೇ ವೇಳೆ ವೇದಿಕೆ ಮೇಲಿದ್ದ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಪ್ರೇಮಾರನ್ನ ಪೊಲೀಸರು ಬಲವಂತವಾಗಿ ಎಳೆದು ವಶಕ್ಕೆ ಪಡೆದರು. ಈ ವೇಳೆ ಬಾಯಿ ಬಡಿದುಕೊಳ್ಳೋ ಮೂಲಕ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು.

ರಾಜ್ಯ ಬಿಜೆಪಿ ಸರ್ಕಾರ ಪೊಲೀಸರನ್ನ ಛೂ ಬಿಟ್ಟು ನಮ್ಮ ಮೇಲೆ ದೌರ್ಜನ್ಯ ಎಸಗುತ್ತಿದೆ ಅಂತಾ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ರು. ಯಾರಿಗೂ ತೊಂದರೆ ಕೊಡದೆ ನಾವು ಪ್ರತಿಭಟನೆ ನಡೆಸುತ್ತಿದ್ದೆವು. ಆದ್ರೂ ನಮ್ಮನ್ನ ಎಳೆದುಕೊಂಡು ಹೋಗ್ತಿದ್ದಾರೆ. ಸರ್ಕಾರ ನಮ್ಮನ್ನ ನಡು ನೀರಲ್ಲಿ ಕೈಬಿಟ್ಟಿದೆ ಅಂತಾ ಕಣ್ಣೀರು ಹಾಕಿದ್ರು.

ಇನ್ನು ಹೋರಾಟದಲ್ಲಿ ಭಾಗಿಯಾಗಿದ್ದ ಶಿಕಾರಿಪುರದ ನೀಲಮ್ಮ ಅನ್ನೋರು ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ಯಕರ್ತೆಯೊಬ್ಬರು, ಕಳೆದ ಮೂರು ದಿನಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ನೀಲಮ್ಮ ಭಾಗವಹಿಸಿದ್ದರು. ಅವರಿಗೆ ಚಳಿ, ಜ್ವರ ಕಾಣಿಸಿಕೊಂಡಿದ್ದರಿಂದ ನಿನ್ನೆ ಶಿವಮೊಗ್ಗಕ್ಕೆ ಕಳಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

suddiyaana