ಸತ್ಯ ಆದಷ್ಟು ಬೇಗ ಹೊರಬರಲಿದೆ – ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಸತ್ಯ ಆದಷ್ಟು ಬೇಗ ಹೊರಬರಲಿದೆ – ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಭಾರಿ ಸಂಚಲನ ಮೂಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ಹಾಗೂ ಹೆಚ್‌ಡಿ ರೇವಣ್ಣ ಅವರು 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕು ಅಂತಾ ಎಸ್‌ಐಟಿ ನೋಟಿಸ್‌ ನೀಡಿದೆ. ಈ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ಎಸ್‌ಐಟಿ ತನಿಖೆಗೆ ಸಂತ್ರಸ್ತೆಯರು ಹಿಂದೇಟು!

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಜ್ವಲ್‌ ರೇವಣ್ಣ, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ  ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಪ್ರಧಾನಿಗೆ ಪತ್ರ ಬರೆದ ಸಿಎಂ!

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ. ಈಗ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ಪರಾರಿಯಾಗಿದ್ದಾರೆ. ಆರೋಪಿ ಪ್ರಜ್ವಲ್ ರೇವಣ್ಣ ಅವರು ಭಾರತದಲ್ಲಿ ತನಿಖೆ ಹಾಗೂ ವಿಚಾರಣೆಯನ್ನು ಎದುರಿಸಬೇಕು. ಹೀಗಾಗಿ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇನ್ನು  ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕೂಡ ಕಿಡಿಕಾರಿದ್ದಾರೆ. ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಹಗರಣ ಗೊತ್ತಿದ್ದೂ ಕೂಡ ಬಿಜೆಪಿ ಪಕ್ಷ ಜೆಡಿಎಸ್‌ ಜೊತೆ ಮೈತ್ರಿ ಮಾಡಿಕೊಂಡಿದ್ದು ಮೊದಲ ತಪ್ಪು. ಅವರಿಗೆ ಮೈತ್ರಿ ಅಭ್ಯರ್ಥಿಯಾಗಿ ಟಿಕೆಟ್‌ ನೀಡಿದ್ದು ಎರಡನೇ ತಪ್ಪು. ಹಗರಣ ಬೆಳಕಿಗೆ ಬಂದ ಮೇಲೆ ಅವರನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಇನ್ನೊಂದು ತಪ್ಪು ಎಂದು ಹೇಳಿದ್ದಾರೆ.

Shwetha M