ಹಾಸನ ಪೆನ್‌ಡ್ರೈವ್‌ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಹಾಸನ ಪೆನ್‌ಡ್ರೈವ್‌ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

ಹಾಸನದಲ್ಲಿ ಭಾರೀ ಸದ್ದು ಮಾಡಿರುವ ಲೈಂಗಿಕ ದೌರ್ಜನ್ಯಗಳ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಸದ್ಯ ತಲೆಮರೆಸಿಕೊಂಡಿದ್ದಾರೆ. ಎಸ್‌ಐಟಿ ಕೂಡ ಇಂಚಿಂಚು ಮಾಹಿತಿಯನ್ನು ಕಲೆ ಹಾಕಿ ತನಿಖೆ ನಡೆಸುತ್ತಿದೆ. ಪ್ರಜ್ವಲ್‌ ರೇವಣ್ಣ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಇಂಚಿಂಚು ವಿಚಾರವನ್ನ ಹಂಚಿಕೊಂಡಿದ್ದಾರೆ. ಈ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಎಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ವಿಡಿಯೋ ಪ್ರಕರಣ – ನಿರೀಕ್ಷಣ ಜಾಮೀನು ಮೊರೆ ಹೋದ ತಂದೆ ಮಗ!

ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆದಿದೆ. ಈ ಸಭೆ ಬಳಿಕ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಾಗಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಜ್ವಲ್ ರೇವಣ್ಣ ಅವರನ್ನು ಅಮಾನತು ಮಾಡಲಾಗಿದೆ. ಈ  ಸಭೆಯಲ್ಲಿ ಪಕ್ಷದ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಸೇರಿದಂತೆ ಆಲ್ಕೋಡ್ ಹನುಮಂತಪ್ಪ, ಬಂಡೆಪ್ಪ ಕಾಶೆಂಪೂರ್, ಸಿ.ಎಸ್.ಪುಟ್ಟರಾಜು, ವೆಂಕಟ್‌ರಾವ್ ನಾಡಗೌಡ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದರು.

ಇನ್ನು ಈ ಬಗ್ಗೆ ಮಾತನಾಡಿದ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಪ್ರಜ್ವಲ್ ರೇವಣ್ಣ ವಿರುದ್ಧ SIT ತನಿಖೆಯನ್ನು ಸ್ವಾಗತಿಸುತ್ತೇವೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಪಕ್ಷದಿಂದ ಅಮಾನತುಗೊಳಿಸಲು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಶಿಫಾರಸು ಮಾಡಲು ನಾವು ನಿರ್ಧಾರ ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಇನ್ನು ಪ್ರಜ್ವಲ್‌ ರೇವಣ್ಣ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರೆ ಸಂಸತ್ ಸದಸ್ಯ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದ್ದು, ಪಕ್ಷದಿಂದ ಉಚ್ಚಾಟಿಸದಿದ್ರೆ ಮತ್ತಷ್ಟು ಜನಾಕ್ರೋಶಕ್ಕೆ ಗುರಿಯಾಗುವ ಆತಂಕ ಜೆಡಿಎಸ್ ಪಕ್ಷಕ್ಕೆ ಎದುರಾಗಿದೆ. ಹೀಗಾಗಿ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ಎಲ್ಲ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Shwetha M