ನಾನು, ರಾಹುಲ್ ಒಟ್ಟಿಗೆ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗ್ತಿತ್ತು! – ಚುನಾವಣೆಯಲ್ಲಿ ಸ್ಪರ್ಧಿಸದಿರಲು ಕಾರಣ ತಿಳಿಸಿದ ಪ್ರಿಯಾಂಕಾ
ಉತ್ತರಪ್ರದೇಶದ ರಾಯ್‌ಬರೇಲಿ ಕಾಂಗ್ರೆಸ್ಗೆ ಪ್ರತಿಷ್ಠೆಯ ಕಣವಾಗಿದೆ. 2019 ರ ಚುನಾವಣೆಯಲ್ಲಿ ಇಡೀ ರಾಜ್ಯದಲ್ಲಿ ಸೋತರೂ ರಾಯ್‌ಬರೇಲಿಯಲ್ಲಿ ಮಾತ್ರ ಪಕ್ಷ ಗೆಲುವು ಸಾಧಿಸಿತ್ತು. ಈ ಬಾರಿಯೂ ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಭಾರಿ ಕಸರತ್ತು ಮಾಡುತ್ತಿದೆ. ಈ ಬಾರಿ ಪ್ರಿಯಾಂಕ ವಾದ್ರಾ ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಕಡೇ ಕ್ಷಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಣಕ್ಕೆ ಇಳಿದಿದ್ದಾರೆ. ಇದೀಗ ಚುನಾವಣೆಗೆ ಯಾಕೆ ಸ್ಪರ್ಧಿಸಿಲ್ಲ ಅಂತಾ ಪ್ರಿಯಾಂಕ ಹೇಳಿದ್ದಾರೆ.
ಇದನ್ನೂ ಓದಿ: ಆರ್‌ಸಿಬಿ ಮತ್ತು ಸಿಎಸ್‌ಕೆ ಕದನಕ್ಕೆ ಕೌಂಟ್‌ಡೌನ್ – RCBಗೆ ಧೋನಿ, ಜಡ್ಡು ಭಯ..!
ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ದೇಶಾದ್ಯಂತ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ. ರಾಹುಲ್ ಗಾಂಧಿ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಅದು ಬಿಜೆಪಿಗೆ ಲಾಭವಾಗುತ್ತಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಳೆದ 15 ದಿನಗಳಿಂದ ನಾನು ರಾಯ್ ಬರೇಲಿಯಲ್ಲಿ ಪ್ರಚಾರ ಮಾಡುತ್ತಿದ್ದೇನೆ. ಗಾಂಧಿ ಕುಟುಂಬಕ್ಕೂ ರಾಯ್ ಬರೇಲಿಗೂ ಹಳೆಯ ಸಂಬಂಧವಿದೆ. ಹಾಗಾಗಿ, ನಾವು ಇಲ್ಲಿಗೆ ಬಂದು ಅವರನ್ನು ಭೇಟಿ ಮಾಡಿ ಅವರೊಂದಿಗೆ ಸಂವಹನ ನಡೆಸುತ್ತೇವೆ ಎಂದು ಜನರು ನಿರೀಕ್ಷಿಸುತ್ತಾರೆ. ನಾವು ರಿಮೋಟ್ ಕಂಟ್ರೋಲ್ ಮೂಲಕ ಇಲ್ಲಿ ಚುನಾವಣೆ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ರಾಯ್ ಬರೇಲಿಯಿಂದ ಪ್ರಿಯಾಂಕಾ ಗಾಂಧಿ ಮತ್ತು ಅಮೇಥಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸಬಹುದು ಎಂಬ ಮಾತುಗಳು ಕೇಳಿಬಂದಿತ್ತು. ಸಾಕಷ್ಟು ಕಸರತ್ತಿನ ಬಳಿಕ ಕೊನೇ ಕ್ಷಣದಲ್ಲಿ ರಾಯ್ ಬರೇಲಿಯಿಂದ ರಾಹುಲ್ ಗಾಂಧಿ ಮತ್ತು ಅಮೇಥಿಯಿಂದ ಕಿಶೋರಿ ಲಾಲ್ ಶರ್ಮಾ ಅವರನ್ನ ಹೈಕಮಾಂಡ್ ಕಣಕ್ಕಿಳಿಸಿದೆ. ಈ ನಡುವೆ ಪ್ರಿಯಾಂಕಾ ಸ್ಪರ್ಧೆಯಿಂದ ಹಿಂದೆ ಸರಿದ ಬಗ್ಗೆ ಸಾಕಷ್ಟು ಚರ್ಚೆ ಹುಟ್ಟಿಕೊಂಡಿತ್ತು.