ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಗ್ಗೆ ಬಾಯಿಬಿಟ್ಟ ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗಿನ ಚರ್ಚೆ ಬಗ್ಗೆ ಬಾಯಿಬಿಟ್ಟ  ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ  ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರು ಗೂಡ್ಲೂರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದು, ಮಾರ್ಗ ಮಧ್ಯೆ ಭೇಟಿ ಮಾಡಲಾಗಿದೆ. ಸಂಜೆ ದೆಹಲಿಗೆ ತೆರಳುವಾಗಲೂ ಬೀಳ್ಕೊಡಲಾಗುವುದು ಎಂದು ಹೇಳಿದರು.

ಪಕ್ಷದಲ್ಲಿ ಅಧಿಕಾರ ಹಂಚಿಕೆಯ ಬಗ್ಗೆ ಗೊಂದಲಗಳಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಇದೆಲ್ಲ ಮಾಧ್ಯಮಗಳ ಸೃಷ್ಟಿ ಎಂದರು. ಪಕ್ಷದ ಶಾಸಕರೇ ಈ ಬಗ್ಗೆ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಶಾಸಕರಿಗೆ ಈ ಕುರಿತು ತಿಳಿದಿರುವುದಿಲ್ಲ. ನಾನು ಅಥವಾ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾತನಾಡಬೇಕು ಎಂದರು.

ಇದನ್ನೂ ಓದಿ: ಧ್ರುವಂತ್‌ಗೆ ಕಿಚ್ಚನ ಸೀಸನ್‌ ಚಪ್ಪಾಳೆ ಅಲ್ಲ.. ವಾರದ ಚಪ್ಪಾಳೆ! – ವೀಕ್ಷಕರ ಆಕ್ರೋಶದ ಬೆನ್ನಲ್ಲೇ ಯೂಟರ್ನ್‌!

ಅಧಿಕಾರ ಹಂಚಿಕೆ ವಿಚಾರದಲ್ಲಿ ಅಂತಿಮವಾಗಿ ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆದುಕೊಳ್ಳಲಾಗುವುದು. ಶಾಸಕರಿಗಿಂತ ಹೆಚ್ಚಾಗಿ ಮಾಧ್ಯಮಗಳೇ ಈ ಕುರಿತು ಹೆಚ್ಚು ಮಾತನಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸರ್ಕಾರ ಸಿದ್ಧವಿದೆ. ಬಿಜೆಪಿ, ಜೆಡಿಎಸ್‌ನಿಂದ ಪಾಲಿಕೆ ಚುನಾವಣೆಗಳಲ್ಲಿ ಯಾವುದೇ ಪರಿಣಾಮ ಉಂಟಾಗುವುದಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಬಹುತೇಕ ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಮುಖ್ಯಮಂತ್ರಿಯಾಗಿ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಹಾವೇರಿಯಲ್ಲಿ ಸಾಧನಾ ಸಮಾವೇಶವನ್ನು ಆಯೋಜಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.‌

Kishor KV