ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಶಾಲೆ, ಕಾಲೇಜುಗಳಿಗೆ ರಜೆ – ಕೊಡಗಿನಲ್ಲಿ ಮಳೆಯ ಆರ್ಭಟಕ್ಕೆ ಶಾಲಾ ಕಾಲೇಜುಗಳಿಗೆ ರಜೆ
ಕರಾವಳಿ ಜಿಲ್ಲೆಗಳಲ್ಲಿ ಈ ಬಾರಿ ಶುರುವಾದ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಅದರಲ್ಲೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 16 ರಿಂದ 18 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ:ದೇವರನ್ನೇ ನಂಬದ ವಿರಾಟ್ ಈಗ ಅಪ್ಪಟ ಭಕ್ತ – ಅದೆಷ್ಟು ನಂಬಿಕೆ?
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರ ವಹಿಸಲು ಸಲಹೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ವಿಪತ್ತು ನಿರ್ವಹಣಾ ಪ್ರಾಧಿಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ವಹಿಸುತ್ತಿದೆ. ಆದೇಶದಲ್ಲಿ ಉಲ್ಲೇಖಿಸಲಾಗಿರುವ ಸಲಹೆ ಸೂಚನೆಗಳನ್ನು ಇಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ದುರ್ಬಲ, ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು. ನೀರು ಇರುವ ತಗ್ಗು ಪ್ರದೇಶ, ಕರೆ, ನದಿ ತೀರ ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವುದು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಸಿಡಿಲಬ್ಬರದ ಮಳೆ ಮುಂದುವರಿದಿದೆ. ಕೆಲವೆಡೆ ಮಾತ್ರ ಅಲ್ಲ ಜಿಲ್ಲೆಯಾದ್ಯಂತ ಮಳೆ ಧಾರಾಕಾರವಾಗಿ ಸುರಿಯುತ್ತಿದೆ. ದೃಶ್ಯಗಳಲ್ಲಿ ಕಾಣುವ ಹಾಗೆ ಘಟ್ಟಗಳ ಪ್ರದೇಶ ಹಾಗೂ ಮಡಿಕೇರಿ ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಮಳೆ ಧೋ ಅಂತ ಸುರಿಯಲಾರಂಭಿಸಿದೆ. ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲಾಡಳಿತ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಳೆಯ ಕಾರಣ ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ. ತಲಕಾವೇರಿ ಬಳಿ ಬೃಹತ್ ಗಾತ್ರ ಮರವೊಂದು ನೆಲಕ್ಕುರುಳಿರುವದರಿಂದ ಭಾಗಮಂಡಲಕ್ಕೆ ತೆರಳುವ ರಸ್ತೆಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳದಲ್ಲಿರುವ ವಿದ್ಯುತ್ ಕಂಬಗಳು ಸಹ ಉರುಳಿ ಬಿದ್ದಿವೆ. ನಮ್ಮ ಮಡಿಕೇರಿ ವರದಿಗಾರ ನೀಡಿರುವ ಮಾಹಿತಿಯ ಪ್ರಕಾರ ಅರಣ್ಯ ಇಲಾಖೆಯ ಸಿಬ್ಬಂದಿ ಮರ ತೆರವು ಮಾಡಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡಿದ್ದಾರೆ. ಮಳೆ ನಿಲ್ಲದ ಸೂಚನೆಯಿರದ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.