KPSC ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ – ಅಧಿಕಾರಿಗಳು ಅಮಾನತು, ಮರು ಪರೀಕ್ಷೆ ನಡೆಸುವಂತೆ ಸಿಎಂ ಘೋಷಣೆ
ಕರ್ನಾಟಕ ಲೋಕಸೇವಾ ಆಯೋಗ ಆಗಸ್ಟ್ 27ರಂದು ನಡೆಸಿದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಶ್ನೆ ಪತ್ರಿಕೆಗಳಲ್ಲಿ ಹಲವು ಲೋಪದೋಷ ಕಂಡು ಬಂದಿತ್ತು. ಈ ಬಗ್ಗೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸಿಎಂ ಸಿದ್ಧರಾಮಯ್ಯ ಕ್ರಮಕೈಗೊಂಡಿದ್ದು ಅಧಿಕಾರಿಗಳನ್ನ ಅಮಾನತು ಮಾಡಿದ್ದಾರೆ. ಅಷ್ಟೇ ಅಲ್ಲದೇ ಪರೀಕ್ಷೆಯನ್ನು ಮರು ನಡೆಸುವಂತೆ ಮುಖ್ಯಮಂತ್ರಿ ಸಿಎಂ ಸೂಚಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಬಂಪರ್ – ಹೊಸ ಆಫರ್ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಆಗಸ್ಟ್ 27 ರಂದು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರ್ಸ್ 384 ಹುದ್ದೆಗಳ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡ ದೋಷ ಕಂಡು ಬಂದಿದ್ದವು. ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆದ ಸಾವಿರಾರು ಅಭ್ಯರ್ಥಿಗಳು ಈ ಸಮಸ್ಯೆಯನ್ನು ದೂರಿ ಮರು ಪರೀಕ್ಷೆಗೆ ಆಗ್ರಹಿಸಿದ್ದರು. ಅಲ್ಲದೇ ಕೆಪಿಎಸ್‌ಸಿ ಕರ್ಮಕಾಂಡಗಳನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದರು. ಗೋಕಾಕ್ ಚಳವಳಿ 2 ಎಂಬ ಹೆಸರಿನಲ್ಲಿ ಚಳವಳಿ ನಡೆಸಲು ಸಹ ಯೋಜನೆ ರೂಪಿಸಲಾಗಿತ್ತು. ಇದೀಗ ಕೆಎಎಸ್ ಪ್ರಿಲಿಮ್ಸ್ ಬರೆದ ಅಭ್ಯರ್ಥಿಗಳ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಸದರಿ ಪರೀಕ್ಷೆಯನ್ನು ಮತ್ತೆ ನಡೆಸಲು ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.
ಪೋಸ್ಟ್ನಲ್ಲಿ ಏನಿದೆ?
ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ.
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.